ಬಂಟ್ವಾಳ: ಲೈಂಗಿಕ ದೌರ್ಜನ್ಯವೆಸಗಿರುವ ಬಂಟ್ವಾಳ ತಾಲೂಕಿನ ಪ್ರತಿಷ್ಠಿತ SVS ಕಾಲೇಜಿನ ಸಂಚಾಲಕ, ಇಬ್ಬರು ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಮತ್ತು ಶೈಕ್ಷಣಿಕ ವ್ಯವಸ್ಥೆಯ ಕೊರತೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ಈ ಹಿಂದೆ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಪ್ರಕಾಶ್ ಶೆಣೈ ವಿರುದ್ಧ ಮಹಿಳಾ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿತ್ತು. ಸದ್ಯ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು ಕಾಲೇಜಿನ ಅವ್ಯವಸ್ಥೆಯನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರನ್ನು ಛೂ ಬಿಟ್ಟು ವಿನಾಕಾರಣ ಕಿರುಕುಳ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿಗಳು ದೂರಿದ್ದಾರೆ.
ಈ ನಿಟ್ಟಿನಲ್ಲಿ ಪ್ರಕರಣ ದಾಖಲಾಗಿರುವ ಕಾಲೇಜು ಸಂಚಾಲಕ ಪ್ರಕಾಶ್ ಶೆಣೈ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಪ್ರಕರಣ ದಾಖಲಾಗಿರುವ ಇಬ್ಬರು ಶಿಕ್ಷಕರನ್ನು ತಕ್ಷಣ ಕರ್ತವ್ಯದಿಂದ ವಜಾಗೊಳಿಸುವಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.