ಭಾರತೀಯ ರಾಯಭಾರಿಗೆ ಸಮನ್ಸ್ ನೀಡಿದ ಕತಾರ್; ಸರ್ಕಾರದ ಅಭಿಪ್ರಾಯವಲ್ಲ ಎಂದ ಕೇಂದ್ರ ಸರ್ಕಾರ
ಹೊಸದಿಲ್ಲಿ: ಪ್ರವಾದಿ ಮುಹಮ್ಮದ್ ಅವರ ನಿಂದನೆ ಪ್ರಕರಣವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ ಇದೀಗ ಕತಾರ್ ಸರ್ಕಾರ ಭಾರತೀಯ ರಾಯಭಾರಿಗೆ ಸಮನ್ಸ್ ನೀಡಿದೆ.
ಟಿವಿ ಚರ್ಚಾ ಕಾರ್ಯಕ್ರಮದಲ್ಲಿ ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸಿದ ಘಟನೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಬಿಜೆಪಿ ವರಿಷ್ಠರು, ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಹಾಗೂ ನವೀನ್ ಕುಮಾರ್ ಜಿಂದಾಲ್ ಅವರನ್ನು ವಜಾಗೊಳಿಸಿದ್ದಾರೆ.
“ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಸರಕಾರವು ಸಾರ್ವಜನಿಕ ಕ್ಷಮೆ ಯಾಚಿಸಬೇಕು ಹಾಗೂ ಖಂಡನೆ ವ್ಯಕ್ತಪಡಿಸಬೇಕು” ಎಂದು ಕತಾರ್ ಆಗ್ರಹಿಸಿದೆ. ಜೊತೆಗೆ, ಇಬ್ಬರು ವಕ್ತಾರರನ್ನು ವಜಾಗೊಳಿಸಿದ್ದನ್ನು ಸ್ವಾಗತಿಸಿದೆ. ಇಂತಹ ಹೇಳಿಕೆಗಳು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ ಎಂದೂ ಅದು ತಿಳಿಸಿದೆ.
ಸೌದಿ ಅರೇಬಿಯಾ, ಈಜಿಪ್ಟ್, ಕತಾರ್, ಒಮನ್, ಕುವೈಟ್, ಯುಎಸಿ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಭಾರತ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಒಮಾನ್ ಗ್ರ್ಯಾಂಡ್ ಮುಫ್ತಿ ಶೇಖ್ ಅಲ್ ಖಲೀಲಿ ಅವರು ಪ್ರವಾದಿ ಅವರನ್ನು ನಿಂದಿಸುವ ಮೂಲಕ ವಿಶ್ವದ ಪ್ರತಿಯೊಬ್ಬ ಮುಸ್ಲಿಮರ ವಿರುದ್ಧ ಯುದ್ಧ ಘೋಷಣೆ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕುವೈಟ್ ಸಂಸದರು ಬಿಜೆಪಿಯ ವಿರುದ್ಧ ಹರಿಹಾಯ್ದಿದ್ದಾರೆ.
ಕತಾರ್ ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್ ನೀಡಿ, ಅಲ್ಲಿನ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತೀಯ ಕಚೇರಿಯು, ಟ್ವೀಟ್ ಗಳು ಯಾವುದೇ ರೀತಿಯಲ್ಲಿ ಭಾರತ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಇವುಗಳು ಸರ್ಕಾರದ ದೃಷ್ಟಿಕೋನವಲ್ಲ ಎಂದು ತಿಳಿಸಿತ್ತು.
ಕುವೈಟ್ ನ ಕಸದ ತೊಟ್ಟಿಯಲ್ಲಿ ಮೋದಿ ವಿರುದ್ಧ ಚಿತ್ರಗಳನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಲಾಗುತ್ತಿದೆ.
ಈ ಮಧ್ಯೆ ಕುವೈತ್ ಕೂಡ ಭಾರತದ ರಾಯಭಾರಿಗೆ ಸಮನ್ಸ್ ನೀಡಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿದೆ.