ಹೈದರಾಬಾದ್: ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಶಾಸಕನ ಪುತ್ರ ಸೇರಿ ಎಲ್ಲಾ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಪೈಕಿ ನಾಲ್ವರು ಬಾಲಾರೋಪಿಗಳಾಗಿದ್ದು, ಮತ್ತೊಬ್ಬ ವಯಸ್ಕ ಆರೋಪಿಯನ್ನು ಸಾದುದ್ದೀನ್ ಮಲಿಕ್ (18 ವರ್ಷ) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಆರನೇ ಬಾಲಾರೋಪಿಯಾಗಿ ಎಐಎಂಐಎಂ ಶಾಸಕನ ಪುತ್ರನನ್ನು ಹೆಸರಿಸಲಾಗಿದ್ದು, ಆತನನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದುದ್ದೀನ್ ಮಲಿಕ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ), 323 (ಆಘಾತ ಉಂಟುಮಾಡಲು ಕಾರಣರಾಗುವುದು), 366 (ಅಪಹರಣ) ಹಾಗೂ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ವಿಡಿಯೊ ಚಿತ್ರೀಕರಣ ಮಾಡಿದ ಆರೋಪದಲ್ಲಿ ಐಟಿ ಕಾಯ್ದೆಯ ಸೆಕ್ಷನ್ 67ರ ಅಡಿ ಪ್ರಕರಣ ದಾಖಲಿಸಲಾಗಿದೆ.
ಆರನೇ ಆರೋಪಿಯು ಅತ್ಯಾಚಾರದಲ್ಲಿ ಭಾಗಿಯಾಗಿಲ್ಲವಾದರೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ರಚಿಸಲಾಗುವುದು. ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷ್ಯವಿದೆ’ ಎಂದು ಹೈದರಾಬಾದ್ ಪೊಲೀಸ್ ಆಯುಕ್ತ ಸಿ.ವಿ. ಆನಂದ್ ತಿಳಿಸಿದ್ದಾರೆ.
ಮೇ 28 ರಂದು ಹೈದರಾಬಾದ್ ನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಪಾರ್ಟಿ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಅಪ್ರಾಪ್ತ ಬಾಲಕಿಯ ತಂದೆ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.