ಬಾಲಕಾರ್ಮಿಕ ಪದ್ಧತಿ ಕೊನೆಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಎಂ.ಎಂ.ಯತ್ನಟ್ಟಿ

Prasthutha|

ಮಡಿಕೇರಿ: ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಈ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರಲು ಪ್ರತಿಯೊಬ್ಬರೂ ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ ಎಂದು ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಹೇಳಿದರು.

- Advertisement -

ನಗರದ ನಗರಸಭಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಬಾಲಕಾರ್ಮಿಕ ಪದ್ಧತಿಯನ್ನು ಕೊನೆಗೊಳಿಸಲು ‘ಸಾರ್ವತ್ರಿಕ ಸಾಮಾಜಿಕ ರಕ್ಷಣೆ’ ಎಂಬ ಘೋಷವಾಕ್ಯದಡಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಸಮಾರಂಭದಲ್ಲಿ ಮಾತನಾಡಿದ ಅವರು,ಬಾಲ್ಯಾವಸ್ಥೆಯ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ, 1986 ಹಾಗೂ ತಿದ್ದುಪಡಿ 2016ರ ಕುರಿತು ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರಿಕರ ಕರ್ತವ್ಯವಾಗಿದೆ. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ (ವಾರೆಂಟ್ ರಹಿತ ಬಂಧಿಸಬಹುದಾದ) ಅಪರಾಧವಾಗಿದೆ ಎಂದು ಅವರು ಹೇಳಿದರು.

- Advertisement -

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ರಂತೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ.20 ಸಾವಿರದಿಂದ ರೂ.50 ಸಾವಿರಗಳ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ ಎಂದು ತಾಲೂಕು ಕಾರ್ಮಿಕ ಅಧಿಕಾರಿ ಅವರು ಹೇಳಿದರು.

ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ದತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಲಘು ಶಿಕ್ಷಾ ಪ್ರಾವಧಾನವಿದ್ದು, ಪುನರಾವರ್ತಿತ ಅಪರಾದಕ್ಕೆ ರೂ.10 ಸಾವಿರಗಳ ದಂಡ ವಿಧಿಸಬಹುದಾಗಿದೆ ಎಂದು ಯತ್ನಟ್ಟಿ  ಹೇಳಿದರು.



Join Whatsapp