ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಬಾರಿ ವಿಚಾರಣೆ ಎದುರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮತ್ತೆ ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.
ರಾಹುಲ್ ಗಾಂಧಿ ಅವರನ್ನು 4 ದಿನಗಳಲ್ಲಿ ಸುಮಾರು 40 ಗಂಟೆಗೂ ಹೆಚ್ಚು ಕಾಲ ವಿಚಾರಣೆ ಮಾಡಲಾಗಿದೆ. ಕಳೆದ ವಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸತತ ಮೂರು ದಿನಗಳ ವಿಚಾರಣೆಯ ನಂತರ, ಇಡಿ ಸೋಮವಾರ ಸುಮಾರು 14 ಗಂಟೆಗಳ ಕಾಲ ವಿಚಾರಣೆ ನಡೆಸಿತು. ಬಳಿಕ ಮಂಗಳವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದು ರಾಹುಲ್ ಗಾಂಧಿ ವಿಚಾರಣೆ ಹಿನ್ನೆಲೆ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.