ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ನಡೆದ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಮಾನವೀಯ ಕೊಲೆಯ ವಿರುದ್ಧ ದೇಶಾದ್ಯಂತ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅಶೋಕ್ ಗೆಹ್ಲೋಟ್ ಸರಕಾರವನ್ನು ಒತ್ತಾಯಿಸಿದ್ದಾರೆ.
ಮೃತ ಕನ್ನಯ್ಯಲಾಲ್ ಈ ಹಿಂದೆ ಪ್ರವಾದಿಯವರನ್ನು ಅವಹೇಳನ ಮಾಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಸಿ ಪೋಸ್ಟ್ ಮಾಡಿದ್ದ ಎನ್ನಲಾಗಿದ್ದು, ಇದೇ ಕಾರಣಕ್ಕೆ ಆತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.