►ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿ ಎಡಿಜಿಪಿ ದರ್ಜೆಯ ಅಧಿಕಾರಿ ಬಂಧನ
ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ರಾಜ್ಯದ ಎಡಿಜಿಪಿ ಅಮೃತ್ ಪಾಲ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರ ಬಂಧನವಾದಂತಾಗಿದೆ.
ಇತ್ತೀಚೆಗಷ್ಟೇ ಸಿಐಡಿ ಅಧಿಕಾರಿಗಳು ಅಮೃತ್ ಪಾಲ್ ಅವರನ್ನು ತೀವ್ರ ವಿಚಾರಣೆ ನಡೆಸಿದ್ದರು.
ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಹುದ್ದೆಯಲ್ಲಿದ್ದ ವೇಳೆ ಆರೋಪಿ ಅಮೃತ್ ಪೌಲ್ 25 ಅಭ್ಯರ್ಥಿಗಳ ಜೊತೆ ತಲಾ 30 ಲಕ್ಷ ರೂ ಡೀಲ್ ಮಾಡಿದ ಆರೋಪ ಕೇಳಿ ಬಂದಿತ್ತು. ಅಲ್ಲದೇ ಇಡೀ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಿರುವ ಮಾತುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸುಮಾರು 45ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ಸಾಕ್ಷಾಧಾರಗಳನ್ನು ಕಲೆ ಹಾಕಿದ್ದ ಸಿಐಡಿ ಅಧಿಕಾರಿಗಳು, ಅಮೃತ್ ಪೌಲ್ ಅವರನ್ನು ಇಲ್ಲಿಯವರೆಗೆ ಮೂರು ಬಾರಿ ವಿಚಾರಣೆ ನಡೆಸಿದ್ದರು.
ನಾಲ್ಕನೇ ಬಾರಿ ಇಂದು ವಿಚಾರಣೆ ಕರೆದು ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ವಿಚಾರಣೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ನೇಮಕಾತಿ ವಿಭಾಗದಲ್ಲಿ ಎಡಿಜಿಪಿಯಾಗಿದ್ದ ಅಮೃತ್ ಪಾಲ್ ಅವರು ಅಕ್ರಮದಲ್ಲಿ ನೇರವಾಗಿ ಪಾಲ್ಗೊಂಡಿರುವ ಬಗ್ಗೆ ಸಾಕ್ಷ್ಯಾಧಾರಗಳು ಸಿಕ್ಕಿದ ನಂತರ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಅಕ್ರಮ ಬೆಳಕಿಗೆ ಬಂದ ನಂತರ ಅಮೃತ್ ಪಾಲ್ ಅವರನ್ನು ನೇಮಕಾತಿ ವಿಭಾಗದಿಂದ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. ನಾಲ್ಕನೇ ಬಾರಿಗೆ ಸೋಮವಾರ ವಿಚಾರಣೆಗೆ ಹಾಜರಾದಾಗ ಸಿಐಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಬಂಧಿಸಿರುವುದಾಗಿ ತಿಳಿಸಿದ್ದಾರೆ.