ಬೆಂಗಳೂರು: ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಇಂದು ದೇವನಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಸಿಎಂ ಈ ಸೂಚನೆ ನೀಡಿದರು.
ಮನೆಗಳಿಗೆ ತುರ್ತು ಪರಿಹಾರ 10 ಸಾವಿರರ ರೂ.ಗಳನ್ನು ನೀಡಿ, ನಂತರ ಮನೆಗಳ ನಿರ್ಮಾಣವನ್ನು ಕೂಡಲೇ ಕೈಗೊಳ್ಳಬೇಕು. ರಸ್ತೆ, ಸೇತುವೆ, ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯ ದುರಸ್ತಿಗೆ ಆದ್ಯತೆ ನೀಡಬೇಕು. ಮಹಾರಾಷ್ಟ್ರದ ಕೋಯ್ನಾ ಜಲಾಶಯಗಳಿಂದ ಹೊರಬಿಡಲಾಗುತ್ತಿರುವ ನೀರಿನ ಮಟ್ಟದ ಬಗ್ಗೆ ನಿಗಾ ವಹಿಸಲು ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಜಲಾಶಯಗಳಿಂದ ನೀರು ಹೊರಬಿಡುವ ಮುನ್ನ ಗ್ರಾಮಗಳಿಗೆ ಎಚ್ಚರಿಕೆ ನೀಡಿ ಜೀವ ಹಾನಿ ಅಥವಾ ಮನೆಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜನರ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು. ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಹಾನಿಗೊಳಗಾಗಿರುವ ಮನೆಗಳ ನಿರ್ಮಾಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಒದಗಿಸಬೇಕು ಮತ್ತು ಬೆಳೆ ಹಾನಿ, ರಸ್ತೆ, ಮನೆಗಳ ಹಾನಿ ಬಗ್ಗೆ ಸಮೀಕ್ಷೆ ಸರಿಯಾಗಿ ಮಾಡಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಜಿಲ್ಲಾಡಳಿತಕ್ಕೆ ನೀಡಿರುವ ಇತರೆ ಸೂಚನೆಗಳು
ಜಿಲ್ಲೆಗಳಲ್ಲಿ ಮುಂದಿನ 5-6 ದಿನಗಳ ಮಳೆ ಹಾಗೂ ಮಳೆ ಮುನ್ಸೂಚನೆಯನ್ನು ಗಮನಿಸುವುದು. ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಸನ್ನದ್ಧರಾಗಬೇಕು.
ಪರಿಹಾರ ಕಾರ್ಯಗಳು ತ್ವರಿತ ಹಾಗೂ ಪಾರದರ್ಶಕ ವಾಗಿರಬೇಕು.
ರಸ್ತೆ ಸಂಪರ್ಕ, ವಿದ್ಯುತ್ ಕಂಬಗಳು ಹಾಗೂ ಕುಡಿಯುವ ನೀರಿನ ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳವುದು
ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು.
ಭೂಕುಸಿತದ ಸಾಧ್ಯತೆಗಳುಳ್ಳ ಪ್ರದೇಶಗಳಲ್ಲಿ ರಸ್ತೆಗಳನ್ನು ತೆರವುಗೊಳಿಸುವುದು ಹಾಗೂ ದುರ್ಬಲ ಪ್ರದೇಶಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲು ತಂಡಗಳನ್ನು ನಿಯೋಜಿಸುವುದು ಹಾಗೂ ಕೂಡಲೇ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಕ್ಕೆ ಕ್ರಮ ವಹಿಸುವುದು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸುವುದು. ಸಮಿತಿಯು ಸಮೀಕ್ಷೆ ಕೈಗೊಂಡು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ನಿಯಂತ್ರಣಾ ಕೊಠಡಿಗಳು ಭಾರಿ ಮಳೆ ಹಾಗೂ ಪ್ರವಾಹ ಸ್ಥಿತಿ ಯ ಕುರಿತ ಅಹವಾಲುಗಳಿಗೆ ಸ್ಪಂದಿಸುವುದು
ಎನ್. ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ತಂಡಗಳಿಗೆ ಅಗತ್ಯವಿರುವ ಲಾಜಿಸ್ಟಿಕ್ಸ್ ನೆರವನ್ನು ಒದಗಿಸಿ ತೊಂದರೆಗೀಡಾದ ಪ್ರದೇಶಗಳಿಗೆ ತಕ್ಷಣವೇ ತಲುಪಲು ಕ್ರಮ ವಹಿಸಬೇಕು. ಜಿಲ್ಲಾ ರಕ್ಷಣಾಧಿಕಾರಿಗಳು ಮೇಲ್ವಿಚಾರಣೆ ಕೈಗೊಳ್ಳಬೇಕು.
ಸಂಬಂಧಿಕರ ಮನೆಗಳಿಗೆ ತೆರಳಿರುವ ಸಂತ್ರಸ್ತರಿಗೆ ಪಡಿತರ ಕಿಟ್ ನ್ನು ಕಂದಾಯ ಇಲಾಖೆ ನೀಡುವ ಪಟ್ಟಿಯಂತೆ ಒದಗಿಸುವುದು.
ವಿದ್ಯುತ್ ಸಂಪರ್ಕ ಪುನಸ್ಥಾಪಿಸಲು ಅತಿ ಹೆಚ್ಚಿನ ಆದ್ಯತೆ ನೀಡಿ ಬಾಧಿತ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಶ್ರಮವಹಿಸಬೇಕು.
ಜಿಲ್ಲಾಡಳಿತದ ವತಿಯಿಂದ ಹಾನಿಯಾಗಿರುವ ರಸ್ತೆ, ಸೇತುವೆ, ಕಲ್ವರ್ಟ್ ಹಾಗೂ ಟ್ಯಾಂಕ್ ಬಂಡ್ ಗಳನ್ನು ತಾತ್ಕಾಲಿಕವಾಗಿ ತಕ್ಷಣವೇ ಸರಿಪಡಿಸಿ, ಶಾಶ್ವತ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವುದು.
ಪ್ರಕೃತಿ ವಿಕೋಪ ಪರಿಹಾರದಡಿ ಕೈಗೊಂಡಿರುವ ಮನೆಗಳ ನಿರ್ಮಾಣ ಕಾರ್ಯವನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು. ಕಳೆದ ಮೂರು ವರ್ಷಗಳ ಅವಧಿಯ ಮನೆಗಳ ನಿರ್ಮಾಣ ಕಾರ್ಯ ಹಾಗೂ ಅವುಗಳನ್ನು ಪೂರ್ಣಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿಸ್ತೃತ ವರದಿ ಸಲ್ಲಿಸುವುದು.
ಬೆಳೆ ಹಾನಿ ಕುರಿತು ತನಿಖೆ ಕೈಗೊಂಡು ಒಂದು ತಿಂಗಳೊಳಗೆ ಇನ್ ಪುಟ್ ಸಬ್ಸಿಡಿ ವಿತರಿಸಬೇಕು
ಕಾಳಜಿ ಕೇಂದ್ರಗಳಲ್ಲಿರುವ ಸಂತ್ರಸ್ತರಿಗೆ ಸರ್ಕಾರಿ ಆದೇಶದಲ್ಲಿ ನೀಡಿರುವ ಆಹಾರ ಪಟ್ಟಿಯನ್ನು ಅನುಸರಿಸಬೇಕು.