ನವದೆಹಲಿ: ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಎನ್ ಡಿಎ ಮೈತ್ರಿಕೂಟವು ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್ ಅವರನ್ನು ಆಯ್ಕೆ ಮಾಡಿದೆ.
ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.
ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಯ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ಪ್ರಸ್ತುತ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್ ಅವರ ಹೆಸರನ್ನು ಪ್ರಕಟಿಸಿದರು.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಇತರೆ ಪ್ರಮುಖ ನಾಯಕರು ಪಕ್ಷದ ಪ್ರಧಾನ ಕಚೇರಿಯಲ್ಲಿ ಶನಿವಾರ ಭೇಟಿಯಾಗಿ ಸಭೆ ನಡೆಸಿದರು.