ತುಮಕೂರು: ಭಾನುವಾರ ಹಾಗೂ ಸಾರ್ವಜನಿಕ ರಜಾ ದಿನಗಳಲ್ಲಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸರ್ಕಾರಿ ರಜಾ ದಿನಗಳಲ್ಲೂ 24/7 ತೆರೆದು ಸೇವೆಗೆ ಲಭ್ಯವಿರುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24/7 ಕಾರ್ಯನಿರ್ವಹಿಸಬೇಕೆಂದು ಎಲ್ಲಾ ಆಸ್ಪತ್ರೆಗಳಲ್ಲಿ ಆದೇಶವಿದ್ದರೂ, ಭಾನುವಾರ ಹಾಗೂ ರಜಾ ದಿನಗಳಲ್ಲಿ ಇತರ ಸರ್ಕಾರಿ ಕಚೇರಿಗಳಂತೆ ಸೇವೆ ಸ್ಥಗಿತ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಬಂದಿತ್ತು.
ಸಾರ್ವಜನಿಕರಿಗೆ ರಜಾ ದಿನಗಳಲ್ಲಿ ಪ್ರಥಮ ಚಿಕಿತ್ಸೆ ಕೂಡ ಸಿಗದೇ ತೊಂದರೆ ಅನುಭವಿಸಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಹಿರಿಯ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು.
ಈ ಹಿನ್ನೆಲೆಯಲ್ಲಿ ಕೊನೆಗೂ ಕಾರ್ಯಪ್ರವೃತ್ತರಾದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್, ಇಲಾಖೆಯ ಮಾರ್ಗಸೂಚಿಯಂತೆ ಭಾನುವಾರ ಹಾಗೂ ಸರ್ಕಾರಿ ರಜೆ ದಿನಗಳಲ್ಲಿ 24/7 ಪ್ರಾಥಮಿಕ ಆರೋಗ್ಯ ಕೆಂದ್ರಗಳನ್ನು ತೆರೆದು ಸೇವೆಗೆ ಲಭ್ಯವಿರುವಂತೆ ಸುತ್ತೋಲೆ ಹೊರಡಿಸಿದ್ದಾರೆ.