ಹಿಂದುಳಿದ ವರ್ಗಗಳ ಇಲಾಖೆಯ ಅಭಿವೃದ್ಧಿ ನಿಗಮಗಳ ಪ್ರಗತಿ ಪರಿಶೀಲನೆ: ಶೇ.100 ಗುರಿ ಸಾಧಿಸಲು ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Prasthutha|

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಅಭಿವೃದ್ಧಿ ನಿಗಮಗಳ ಪ್ರಗತಿ ಪರಿಶೀಲನೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ನಡೆಸಿದರು.

- Advertisement -

ವಿಕಾಸಸೌಧದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಹಿಂದುಳಿದ ವರ್ಗಗಳ ಸಮುದಾಯಗಳ ಅಭಿವೃದ್ಧಿಗಾಗಿ ಸರ್ಕಾರ ಪ್ರತ್ಯೇಕ ನಿಗಮಗಳನ್ನು ತೆರೆದು ವಿವಿಧ ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಕಾಲಮಿತಿಯಲ್ಲಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕ್ರಿಯಾಯೋಜನೆಯಲ್ಲಿ ಅನುಮೋದನೆಗೊಂಡ ಯೋಜನೆಗಳ ಅನುಷ್ಠಾನದಲ್ಲಿ ಶೇ.100 ಗುರಿ ಸಾಧಿಸಬೇಕು ಎಂದು ಸಚಿವರು ಸೂಚಿಸಿದರು.

- Advertisement -

2021-22 ಹಾಗೂ 2022-23ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ಇಲಾಖೆ ವ್ಯಾಪ್ತಿಯ ವಿವಿಧ ಅಭಿವೃದ್ಧಿ ನಿಗಮಗಳಲ್ಲಿ ಗಂಗಾಕಲ್ಯಾಣ ಯೋಜನೆಯಡಿ 11ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಯಲಾಗುತ್ತಿದ್ದು ಪ್ರತಿ ಜಿಲ್ಲೆಗೆ 60ಕ್ಕಿಂತ ಹೆಚ್ಚು ಗುರಿಯನ್ನು ಹಾಗೂ ಪ್ರತಿ ಶಾಸಕರ ವಿವೇಚನೆಯಡಿ ಸುಮಾರು 41ಕೊಳವೆ ಬಾವಿಗಳ ಗುರಿಯನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಯೋಜನೆಯನ್ನು ಜಾರಿಗೆ ತಂದಿರುವುದರಿಂದ ಪ್ರತಿ ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಎಲ್ಲ ನಿಗಮಗಳು ಸುವಿಧಾ ತಂತ್ರಾಂಶದಲ್ಲಿಯೇ ಅರ್ಜಿಗಳನ್ನು ಆಹ್ವಾನಿಸಿ ಫಲಾನುಭವಿಗಳನ್ನು ಅಯ್ಕೆಮಾಡಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಆಯುಕ್ತ ಕೆ.ಎ.ದಯಾನಂದ ಹಾಗೂ ವಿವಿಧ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿದ್ದರು.



Join Whatsapp