ಸಾವಿರಾರು ಜನರಿಂದ ಫಾಝಿಲ್ ಪಾರ್ಥಿವ ಶರೀರದ ಅಂತಿಮ ದರ್ಶನ; ಕಣ್ಣೀರ ವಿದಾಯ

Prasthutha|

ಮಂಗಳೂರು: ದುಷ್ಕರ್ಮಿಗಳಿಂದ ಕಳೆದ ರಾತ್ರಿ ಸುರತ್ಕಲ್ ನಲ್ಲಿ ಹತ್ಯೆಗೀಡಾದ ಫಾಝಿಲ್ ಅವರ ಅಂತ್ಯಸಂಸ್ಕಾರ ಮಂಗಲಪೇಟೆ ಖಬರಸ್ತಾನದಲ್ಲಿ ಶುಕ್ರವಾರ ಬೆಳಗ್ಗೆ ನಡೆಯಿತು.

- Advertisement -

ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕಣ್ಣೀರ ವಿದಾಯ ನೀಡಿದರು.

ಮಂಗಳಪೇಟೆ ಮುಹ್ಯುದ್ದೀನ್ ಜುಮಾ ಮಸೀದಿಯಲ್ಲಿ ಮಯ್ಯತ್ ನಮಾಝ್ ನೆರವೇರಿಸಲಾಯಿತು. ತಂದೆ, ತಾಯಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

- Advertisement -

ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಬಜ್ಪೆ, ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ನಗರ ಹಾಗೂ ಹೊರವಲಯದಲ್ಲಿ ಜನ ಗುಂಪು ಸೇರುವುದು ಪ್ರತಿಭಟನೆ ನಡೆಸುವುದನ್ನು ನಿಷೇಧಿಸಲಾಗಿದ್ದು ಧಾರ್ಮಿಕ ಕೇಂದ್ರಗಳ ಬಳಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಗಸ್ತು ಹೆಚ್ಚಳ ಮಾಡಲಾಗಿದೆ.

ಅಂತರ್ ಜಿಲ್ಲೆ ಮತ್ತು ಅಂತರ್ ರಾಜ್ಯವನ್ನು ಸಂಪರ್ಕಿಸುವ ಗಡಿಯಲ್ಲಿ ಚೆಕ್ ಪೋಸ್ಟ್ಗಳನ್ನು ಹಾಕಿ ವಾಹನಗಳ ತಪಾಸಣೆ ಹೆಚ್ಚಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದ್ದು ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಕರೆಸಿಕೊಂಡು ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ನಡುವೆ ಫಾಜಿಲ್ ಕೊಲೆ ಕೃತ್ಯದ ಸಂಬಂಧ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಫಾಝಿಲ್ ಕೊಲೆ ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನಾಧರಿಸಿ 12 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ಥ್ ವ್ಯವಸ್ಥೆ ಮಾಡಿದ್ದು ಪರಿಸ್ಥಿತಿ ಶಾಂತವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಈ ಮಧ್ಯೆ ನಗರದಲ್ಲಿ ಜಾರಿಗೊಳಿಸಿರುವ ನಿಷೇದಾಜ್ಞೆ ಉಲ್ಲಂಘಿಸಿದ 14 ಜನರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ ಕೊಲೆಯಾದ ಫಾಜಿಲ್ ಅಂತ್ಯಕ್ರಿಯೆ ವೇಳೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದರು.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜು.31ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು ಜನ ಗುಂಪು ಸೇರಿದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ನಗರದ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜಪೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಅಂತರ್ ಜಿಲ್ಲೆ ಮತ್ತು ಅಂತರ್ ರಾಜ್ಯವನ್ನು ಸಂಪರ್ಕಿಸುವ ಗಡಿಯಲ್ಲಿ ಚೆಕ್ ಪೋಸ್ಟ್ಗಳನ್ನು ಹಾಕಲಾಗುತ್ತದೆ. ನಿನ್ನೆ ರಾತ್ರಿ 10 ಗಂಟೆಯಿಂದ ಅನವಶ್ಯಕವಾಗಿ ರಸ್ತೆಗೆ ಇಳಿದರೆ ವ್ಯಕ್ತಿಗಳನ್ನು ಬಂಧಿಸಲಾಗುತ್ತದೆ. ವಾಹನವನ್ನು ಜಪ್ತಿ ಮಾಡಲಾಗುವುದು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಜನರು ಈ ಆದೇಶವನ್ನು ಪಾಲಿಸಬೇಕು ಎಂದು ಶಶಿಕುಮಾರ್ ಮನವಿ ಮಾಡಿದ್ದಾರೆ.

 ಫಾಝಿಲ್ ಹತ್ಯೆ ಬಳಿಕ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಮಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಧಾರ್ಮಿಕ ಕೇಂದ್ರಗಳ ಬಳಿ ಪೊಲೀಸ್ ಗಸ್ತು ಹೆಚ್ಚಳಕ್ಕೆ ಸೂಚಿಸಲಾಗಿದೆ. ಹೊಯ್ಸಳ, ಚೀತಾ ವಾಹನ ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು, ಕೆ.ಎಸ್.ಆರ್.ಪಿ ತುಕಡಿ ನಿಯೋಜನೆಗೂ ಸೂಚಿಸಲಾಗಿದೆ.



Join Whatsapp