ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಅವರ ವಿಚಾರಣೆಯ ಬೆನ್ನಲ್ಲೇ ಜಾರಿ ನಿರ್ದೇಶನಾಲಯವು ಮಂಗಳವಾರ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮುಖ್ಯ ಕಚೇರಿ ಮೇಲೆ ಮತ್ತು ಇತರ ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿದೆ.
ಕಾಂಗ್ರೆಸ್ ಮಾಲಕತ್ವದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮುಖ್ಯ ಕಚೇರಿ ದೆಹಲಿ ಸೇರಿದಂತೆ ಒಟ್ಟು 12 ಸ್ಥಳಗಳ ಮೇಲೆ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸಿದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ನ ಆಸ್ತಿಗಳನ್ನು ಮೋಸದಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (ವೈಐಎಲ್) ಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು. ಇದರಲ್ಲಿ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ತಲಾ 38 ಪ್ರತಿಶತದಷ್ಟು ಷೇರುಗಳನ್ನು ಹೊಂದಿದ್ದರು.