ಲಖನೌ: ಉತ್ತರ ಪ್ರದೇಶದ ನೋಯ್ಡಾ ಸೊಸೈಟಿಯಲ್ಲಿ ಮಹಿಳೆಗೆ ಅವಾಚ್ಯ ಪದಬಳಕೆ ಮಾಡಿ ನಿಂದಿಸಿದ ಬಳಿಕ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆಯು ಮಹತ್ವದ ತಿರುವು ಪಡೆದಿದೆ. ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆತ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಹಲ್ಲೆಕೋರ ಶ್ರೀಕಾಂತ್ ತ್ಯಾಗಿ ಅವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ( NCW) ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ. ಆರೋಪಿ ತ್ಯಾಗಿ ಮೇಲೆ ಪ್ರಕರಣ ದಾಖಲಾಗುತ್ತಿದಂತೆ ಆತ ಸ್ಥಳದಿಂದ ಕಾಲು ಕಿತ್ತಿದ್ದು, ಆತನನ್ನು ಪತ್ತೆಹಚ್ಚಲು ಪ್ರತ್ಯೇಕ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯನ್ನು ನಿಂದಿಸಿ ಹಲ್ಲೆ ನಡೆಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಇದಕ್ಕೆ ಸಂಬಂಧಿಸಿದಂತೆ ಶ್ರೀಕಾಂತ್ ತ್ಯಾಗಿ ವಿರುದ್ಧ ಐಪಿಸಿ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತೆ ಅಂಕಿತಾ ಶರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.