ಮಂಗಳೂರು: 1994ರಲ್ಲಿ ವಾಮಂಜೂರಿನಲ್ಲಿ ತನ್ನದೇ ಕುಟುಂಬದ ನಾಲ್ವರು ಸದಸ್ಯರನ್ನು ಕೊಂದ ಆರೋಪಿ ಪ್ರವೀಣ್ ನನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಲು ಸಿದ್ಧತೆ ನಡೆಯುತ್ತಿದ್ದು, ಇದಕ್ಕೆ ಅವರ ಪತ್ನಿ ಹಾಗೂ ಕುಟುಂಬಸ್ಥರು ಆಕ್ಷೇಪ ವ್ಯಕ್ತಪಡಿಸಿ ಮಂಗಳೂರು ಕಮಿಷನರ್ ಶಶಿಕುಮಾರ್ ಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಪ್ರವೀಣ್ ಪತ್ನಿ, ಪ್ರವೀಣ್ ಕುಮಾರ್ ನನ್ನು ಯಾವ ಕಾರಣಕ್ಕೂ ಬಿಡುಗಡೆ ಮಾಡುವುದು ಬೇಡ. ಆತ ಜೈಲಿನಲ್ಲೇ ಇರಲಿ ಎಂದು ಹೇಳಿದ್ದಾರೆ.
ಮಂಗಳೂರಿನ ಚಿಲಿಂಬಿಯಲ್ಲಿ ಟೈಲರಿಂಗ್ ಕೆಲಸ ಮಾಡುತ್ತಿದ್ದ ಪ್ರವೀಣ್, ಮೂಲತಃ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ನಿವಾಸಿಯಾಗಿದ್ದಾನೆ. ಈತ 1994ರ ಫೆಬ್ರವರಿ 23 ರಂದು ರಾತ್ರಿ ಆತನ ಸಂಬಂಧಿಕರೇ ಆಗಿದ್ದ ಅಪ್ಪಿ ಶೇರಿಗಾರ್ತಿ(75) ಆಕೆಯ ಪುತ್ರಿ ಶಕುಂತಲಾ (36), ಮೊಮ್ಮಗಳು ದೀಪಿಕಾ(9) ಮತ್ತು ಅಪ್ಪಿ ಅವರ ಪುತ್ರ ಗೋವಿಂದ (30) ಅವರನ್ನು ಅವರದ್ದೇ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಬರ್ಬರವಾಗಿ ಕೊಲೆ ಮಾಡಿ ನಗದು, ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದನು.
ನ್ಯಾಯಾಂಗ ಬಂಧನದಲ್ಲಿದ್ದ ಪ್ರವೀಣ್ ನಿಗೆ ಮಂಗಳೂರಿನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಬಳಿಕ ಹೈಕೋರ್ಟು ಮತ್ತು 2003 ರಲ್ಲಿ ಸುಪ್ರೀಂ ಕೋರ್ಟು ಕೂಡಾ ಎತ್ತಿ ಹಿಡಿದಿತ್ತು. ಮರಣ ದಂಡನೆಯ ಶಿಕ್ಷೆಯ ಬಳಿಕ ಆತ ರಾಷ್ಟ್ರಪತಿಗೆ ಕ್ಷಮಾಪಣೆಯ ಅರ್ಜಿಯನ್ನು ಸಲ್ಲಿಸಿದ್ದನು. ಈ ಅರ್ಜಿಯನ್ನು ರಾಷ್ಟ್ರಪತಿಯವರು ತಿರಸ್ಕರಿಸಿದ್ದರು. ಈ ನಡುವೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಕೊಂದಿದ್ದ ಮೂವರ ಗಲ್ಲು ಶಿಕ್ಷೆ ರದ್ದು ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು. ಇದನ್ನೇ ಆಧಾರವಾಗಿಟ್ಟು ಪ್ರವೀಣ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಸುಪ್ರೀಂಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.
ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಪ್ರವೀಣ್ ಗೆ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಸರಕಾರ ಸಿದ್ಧತೆ ನಡೆಸುತ್ತಿದೆ. ಇದಕ್ಕೆ ಸಂತ್ರಸ್ತ ಕುಟುಂಬದವರು ಆತಂಕ ಹಾಗೂ ಅಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
“ಪ್ರವೀಣ್ ಕುಟುಂಬದವರು ಮನವಿ ಸಲ್ಲಿಸಿದ್ದಾರೆ. ಅದನ್ನು ನಿಯಮದಂತೆ ಸರ್ಕಾರದ ಗಮನಕ್ಕೆ ತರಲಾಗುವುದು” ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದರು.