ಮಂಗಳೂರು: ನಗರದ ಉರ್ವಾ ಸ್ಟೋರ್ ಬಳಿ ನಿರ್ಮಾಣವಾಗುತ್ತಿರುವ ತುಳು ಭವನದ ಬಾಕಿ ಉಳಿದ ಕಾಮಗಾರಿಗಳಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದಿಂದ 3.60 ಕೋಟಿ ರೂಗಳನ್ನು ಬಿಡುಗಡೆ ಮಾಡಲಾಗಿದ್ದು, ಅಪೂರ್ಣ ಕಾಮಗಾರಿಗಳಿಗೆ ವೇಗ ನೀಡುವ ಮೂಲಕ ಶೀಘ್ರವಾಗಿ ಪೂರ್ಣಗೊಳಿಸುವಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿಯ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಬುಧವಾರ ನಗರದ ತುಳು ಭವನಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಬಿಡುಗಡೆಯಾಗಿರುವ 3.60 ಕೋಟಿ ರೂಪಾಯಿಗಳಲ್ಲಿ ತುಳು ಭವನದಲ್ಲಿ ಭವ್ಯವಾದ ಸಭಾಂಗಣ, ವಸ್ತು ಪ್ರದರ್ಶನಾಲಯ, ವೇದಿಕೆ ಸಿದ್ಧತೆ, ವಿದ್ಯುದ್ದೀಕರಣ, ಫಾಲ್ ಸೀಲಿಂಗ್, ಸೇರಿದಂತೆ ಬಾಕಿ ಉಳಿದ ಕಾಮಗಾರಿಗಳನ್ನು ಕೈಗೊಳ್ಳಬೇಕು, ಈ ಎಲ್ಲಾ ಕಾಮಗಾರಿಗಳನ್ನು ನವೆಂಬರ್ ನೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಕೊಂಕಣಿ ಅಕಾಡೆಮಿ ಭವನದ ಕಾಮಗಾರಿಗಳನ್ನು ವೀಕ್ಷಿಸಿದ ಅವರು ಭವನ ನಿರ್ಮಾಣಕ್ಕೆ ಸರ್ಕಾರದಿಂದ 3 ಕೋಟಿ ರೂ.ಗಳು ಬಿಡುಗಡೆಯಾಗಿದೆ, ಅಡಿಪಾಯದ ಕಾಮಗಾರಿ ಮುಕ್ತಾಯವಾಗಿದ್ದು, ನೆಲಹಾಸನ್ನು ಸಮತಟ್ಟು ಮಾಡಲಾಗುತ್ತಿದೆ, ಭವನ ನಿರ್ಮಾಣದ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು.
ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಗದೀಶ್ ಪೈ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರತ್ನಾಕರ್, ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಹಾಗೂ ಇತರರು ಉಪಸ್ಥಿತರಿದ್ದರು.
ನಂತರ ಅಧ್ಯಕ್ಷರು ಅಕಾಡೆಮಿಯಲ್ಲಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನ ವೀಕ್ಷಿಸಿದರು.