ವಿಜಯಪುರ: ನೈಸರ್ಗಿಕ ವಿಕೋಪ ಹಿನ್ನೆಲೆಯಲ್ಲಿ ಕಂದಾಯ, ಕೃಷಿ, ತೋಟಗಾರಿಕೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಒಂದು ವಾರದೊಳಗೆ ಜಂಟಿ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಲ್ಲಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅಧಿಕಾರಿಗಳಿಗೆ ಗಡುವನ್ನು ವಿಧಿಸಿದ್ದಾರೆ.
ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಳೆಯಿಂದಾಗಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ಅನ್ಯಾಯವಾಗಬಾರದು. ಹೀಗಾಗಿ ಬೆಳೆನಷ್ಟ ಅನುಭವಿಸಿದ ರೈತರಿಗೆ ಪರಿಹಾರಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಈಗ ಜಿಲ್ಲೆಯಲ್ಲಿ ಸಮೃದ್ಧ ಮಳೆಯಾಗಿದೆ. ಬಿತ್ತನೆ ಮಾಡುವ ರೈತರಿಗೆ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕೊರತೆ ಇರುವ ಬೀಜಗಳ ದಾಸ್ತಾನಿಗೆ ಗಮನ ಹರಿಸಬೇಕು. ರೈತರ ಬೇಡಿಕೆಯಂತೆ ಕಡಲೆ ಮತ್ತು ತೊಗರಿ ಬೀಜಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಾರ್ಚ್ ಅಂತ್ಯದೊಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಚಿವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಹಾನಿಯಾದ ಮನೆಗಳಿಗೆ ನಿಯಮಾನುಸಾರ ಪರಿಹಾರ ಕೊಡಲು ಜಿಲ್ಲಧಕಾರಿಗಳಿಗೆ ಆದೇಶಿಸಿದರು.
ಈ ಸಂದರ್ಭದಲ್ಲಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಹಾಗೂ ಇತರರು ಉಪಸ್ಥಿತರಿದ್ದರು.