ಮಡಿಕೇರಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ’ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ ಶುಕ್ರವಾರ ನಗರದಲ್ಲಿ ಏರ್ಪಡಿಸಿದ್ದ ಮೆರವಣಿಗೆಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಂ.ಭೃಂಗೇಶ್ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಗರದ ಕೋಟೆ ಆವರಣದಲ್ಲಿ ಚಾಲನೆ ನೀಡಿದರು.
ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಎನ್ಡಿಗಆರ್ಎಫ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ, ಹೊರಗುತ್ತಿಗೆ ಸಿಬ್ಬಂದಿ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಮಂದಿಯನ್ನೊಳಗೊಂಡ ಬೃಹತ್ ಮೆರವಣಿಗೆ ನಡೆಯಿತು.
ಪೊಲೀಸ್ ಮತ್ತು ಭಾರತೀಯ ವಿದ್ಯಾಭವನದ ವಿದ್ಯಾರ್ಥಿಗಳ ವಾದ್ಯ ಸಂಗೀತದ ಹಿನ್ನೆಲೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮೆರವಣಿಗೆಯು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಇಂದಿರಾ ಗಾಂಧಿ ವೃತ್ತ ತಲುಪಿ ನಂತರ ಸ್ಕ್ವಾಡ್ರನ್ ಲೀಡರ್ ದೇವಯ್ಯ ವೃತ್ತ– ಮಂಗೆರೀರ ಮುತ್ತಣ್ಣ ವೃತ್ತ– ಜನರಲ್ ತಿಮ್ಮಯ್ಯ ವೃತ್ತದ ಮುಖಾಂತರ ಕೋಟೆ ಆವರಣಕ್ಕೆ ತಲುಪಿತು.
ಜಿಲ್ಲಾಡಳಿತದ ಜತೆಗೆ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘ, ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರ ನೀಡಿದ್ದವು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್, ಸೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯೂ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ಇದ್ದರು.
ಜಾಥಾ ನಂತರ ನಗರದ ಕೋಟೆ ಆವರಣದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲಾಧಿಕಾರಿ ಪಾಲ್ಗೊಂಡಿದ್ದರು.