ಚಿಕ್ಕಮಗಳೂರು: ಜಿಲ್ಲೆಯ 68 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹೆಚ್ಚಾಗಿ ಬಾಲ್ಯವಿವಾಹ ಪ್ರಕರಣಗಳು ವರದಿಯಾಗುತ್ತಿದ್ದು, ಈ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತೀವ್ರ ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷಕ್ಕಿಂತ ಈ ವರ್ಷ ವರದಿಯಾಗಿರುವ ಬಾಲ್ಯವಿವಾಹ ದೂರುಗಳ ಸಂಖ್ಯೆ ಅಧಿಕವಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ಶಾಲೆಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತಾಗಿ ಅರಿವು ಮೂಡಿಸುವ ವ್ಯಾಪಕ ಜನಜಾಗೃತಿ ಮೂಡಿಸಬೇಕು. ಬಾಲ್ಯವಿವಾಹ ಸಂಬಂಧಿಸಿದ ಪ್ರಕರಣಗಳಲ್ಲಿ ಪೋಕ್ಸೋ ಕಾಯ್ದೆಯನ್ನು ದಾಖಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಮಟ್ಟದ ಸಮಿತಿಗಳ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಅಂಗನವಾಡಿಗಳಿಗೆ ಹಾಗೂ ಇಲಾಖೆಯಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳಿಗೆ ನಿರಂತರವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು.
ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಈ ಹಿಂದೆ ಎಫ್.ಐ.ಆರ್ ದಾಖಲಾದ 17 ಪ್ರಕರಣಗಳಲ್ಲಿ, 12 ಪ್ರಕರಣಗಳಲ್ಲಿ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆಂದು ಅಧಿಕಾರಿಗಳು ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು.