ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಜಂಟಿಯಾಗಿ ಮೂರು ದಿನಗಳ ಕಾಲ ಆಯೋಜಿಸಿರುವ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ಸ್ ಕೂಟಕ್ಕೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ಕ್ರೀಡಾಕೂಟವನ್ನು ಚಲನಚಿತ್ರ ನಿರ್ಮಾಪಕಿ ಶೈಲಜಾ ವಿಜಯ್ ಕಿರಗಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ನ ಕಾರ್ಯದರ್ಶಿ ಎ ರಾಜವೇಲು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕುಮಾರನ್ ಸಂಪತ್, ಜಿಲ್ಲಾ ಕಾರ್ಯದರ್ಶಿ ಎಚ್ ಎನ್ ಆನಂದ್ ಕುಮಾರ್, ಜಿಲ್ಲಾ ಕೋಶಾಧಿಕಾರಿ ಚಂದ್ರಮೋಹನ್ ಸೇರಿದಂತೆ ಮತ್ತಿತರರಿದ್ದರು.
ಅಂಡರ್ 14, 16,18, 20, 23 ವಯೋಮಿತಿಯ ಪುರುಷರು ಮತ್ತು ಮಹಿಳೆಯರು ಭಾಗವಹಿಸಲಿದ್ದಾರೆ. ಈ ಕೂಟವು ಕರ್ನಾಟಕ ರಾಜ್ಯ ಜೂನಿಯರ್ ತಂಡಕ್ಕೆ ‘ಆಯ್ಕೆ ಟ್ರಯಲ್ಸ್’ ಆಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಆಗಸ್ಟ್ 26 ರಿಂದ 28ರವರೆಗೆ ಮೂರು ದಿನಗಳ ಕಾಲ ನಡೆಯುವ ಈ ಬಾರಿಯ ಕ್ರೀಡಾಕೂಟದಲ್ಲಿ ಒಟ್ಟು 210 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಒಟ್ಟು ರಾಜ್ಯದ 2000ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕುಮಾರನ್ ಸಂಪತ್ ತಿಳಿಸಿದ್ದಾರೆ.