ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಸರಣಿ ಕೊಲೆ ಪ್ರಕರಣಗಳ ಸಂಬಂಧ ಸರ್ಕಾರದ ತಾರತಮ್ಯ ನೀತಿ ಅನುಸರಿಸಿದೆ ಎಂದು ಆರೋಪಿಸಿರುವ ಸುರತ್ಕಲ್ ಮುಸ್ಲಿಂ ಐಕ್ಯತಾ ವೇದಿಕೆ, ಸರ್ಕಾರದ ತಾರತಮ್ಯದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಸೆಪ್ಟೆಂಬರ್ 9ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಸುರತ್ಕಲ್ ಜಂಕ್ಷನ್ನಲ್ಲಿ ಸಮಾನ ಮನಸ್ಕ ಸಂಘಟನೆಗಳ ಜೊತೆಗೂಡಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸುವುದಾಗಿ ಮುಸ್ಲಿಂ ಐಕ್ಯತಾ ವೇದಿಕೆಯ ಕಾನೂನು ಸಲಹೆಗಾರ ಉಮರ್ ಫಾರೂಕ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸರ್ಕಾರದ ತಾರತಮ್ಯದ ಬಗ್ಗೆ ಪ್ರಧಾನ ಮಂತ್ರಿಗಳಿಗೆ ದೂರು ನೀಡಲು ಮುಸ್ಲಿಂ ಐಕ್ಯತಾ ವೇದಿಕೆ ನಿರ್ಧರಿಸಿದ್ದು, ಸೆ.2ರಂದು ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿಗಳ ಭೇಟಿಗೆ ಜಿಲ್ಲಾಡಳಿತ ಅವಕಾಶ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದರು.
ದಕ್ಷಿಣ ಕನ್ನಡದಲ್ಲಿ ನಡೆದ ಮೂರು ಕೊಲೆಗಳ ಪೈಕಿ ರಾಜ್ಯ ಸರ್ಕಾರ ಒಂದು ಪ್ರಕರಣಕ್ಕೆ ಮಾತ್ರ ಮಹತ್ವ ನೀಡಿದ್ದು, ಓರ್ವನಿಗೆ ಮಾತ್ರ 25 ಲಕ್ಷ ರೂಪಾಯಿ ಪರಿಹಾರ ನೀಡಿ ಆ ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಿದೆ. ಆದರೆ ಉಳಿದ ಎರಡು ಪ್ರಕರಣಗಳನ್ನು ಸರ್ಕಾರ ಕಡೆಗಣಿಸಿದೆ ಎಂದು ಮುಸ್ಲಿಂ ಐಕ್ಯತಾ ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ.
ಸರ್ಕಾರದ ತಾರತಮ್ಯದ ವಿರುದ್ಧ ಪ್ರತಿಭಟನೆ ನಡೆಸುವುದಲ್ಲೇ ಕಾನೂನು ಹೋರಾಟ ನಡೆಸಲಾಗುವುದು. ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಸರ್ಕಾರದ ತಾರತಮ್ಯವನ್ನು ಕಾನೂನಿನ ಮೂಲಕ ಪ್ರಶ್ನಿಸುವುದಾಗಿ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸುರತ್ಕಲ್ ಮುಸ್ಲಿಂ ಐಕ್ಯತಾ ವೇದಿಕೆಯ ಪದಾಧಿಕಾರಿಗಳು ಹಾಗೂ ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ತಂದೆ ಫಾರೂಕ್ ಹಾಜರಿದ್ದರು.