ಕಾನ್ಪುರ: ಟ್ರ್ಯಾಕ್ಟರ್ ಟ್ರಾಲಿಯು ನದಿಗೆ ಉರುಳಿಬಿದ್ದ ಪರಿಣಾಮ 11 ಮಕ್ಕಳು, ಮಹಿಳೆಯರು ಸೇರಿದಂತೆ ಕನಿಷ್ಠ 26 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶನಿವಾರ ರಾತ್ರಿ ನಡೆದಿದೆ. ಕನಿಷ್ಠ 30 ಮಂದಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಂದ್ರಿಕಾ ದೇವಿ ದೇವಸ್ಥಾನದಲ್ಲಿ ನಡೆಯಲಿದ್ದ “ಮುಂಡನ್” ಕಾರ್ಯಕ್ರಮದಲ್ಲಿ ಭಾಗವಹಿಸಿಸಲು 50ಕ್ಕೂ ಹೆಚ್ಚು ಯಾತ್ರಾರ್ಥಿಗಳು ಫತೇಪುರ್‌ನಿಂದ ಘಟಂಪುರಕ್ಕೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭಡೆಯುನಾ ಗ್ರಾಮದ ಬಳಿ ಟ್ರ್ಯಾಕ್ಟರ್ ನದಿಗೆ ಉರುಳಿಬಿದ್ದು ಅವಘಡ ಸಂಭವಿಸಿದೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದರು.
ಪ್ರಧಾನಿ ಮೋದಿ, ಸಿಎಂ ಯೋಗಿ ಸಂತಾಪ
ಘಟನೆ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಕಾನ್ಪುರದಲ್ಲಿ ಟ್ರಾಕ್ಟರ್-ಟ್ರಾಲಿ ಅಪಘಾತದಿಂದ ತೀವ್ರ ನೊಂದಿದ್ದೇನೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರ ನೋವಿನ ಜೊತೆ ನಾನೂ ನಿಲ್ಲುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುತ್ತಿದೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರಧನ ನೀಡಲಾಗುವುದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.