ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಧಾರ್ ಕಾರ್ಡ್‌ಗಳನ್ನು ದಿಢೀರ್ ನಿಷ್ಕ್ರಿಯಗೊಳಿಸಲಾಗಿರುವ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಆಧಾರ್ ಕಾರ್ಡ್‌ಗಳನ್ನು ಹಠಾತ್ ನಿಷ್ಕ್ರಿಯಗೊಳಿಸುವುದರ ಹಿಂದಿನ ಕಾರಣಗಳನ್ನು ತಿಳಿಯಲು ಬಯಸುವುದಾಗಿ ಮಮತಾ ಬ್ಯಾನರ್ಜಿ ಪತ್ರದಲ್ಲಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ವಿಶೇಷವಾಗಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಜನರ ಆಧಾರ್ ಕಾರ್ಡ್‌ಗಳನ್ನು ನಿರ್ದಾಕ್ಷಿಣ್ಯವಾಗಿ ನಿಷ್ಕ್ರಿಯಗೊಳಿಸುವ ಗಂಭೀರ ಸ್ವರೂಪದ ಹಠಾತ್ ಬೆಳವಣಿಗೆಯನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ ಎಂದು ಮಮತಾ ಪತ್ರದಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿರುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ(ಯುಐಡಿಎಐ) ಕೇಂದ್ರ ಕಚೇರಿಯು ಯಾವುದೇ ಕ್ಷೇತ್ರ ವಿಚಾರಣೆ ನಡೆಸದೆ ಅಥವಾ ರಾಜ್ಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ವ್ಯಕ್ತಿಗಳು ಮತ್ತು ಕುಟುಂಬದ ಸದಸ್ಯರಿಗೆ ನೇರವಾಗಿ ನಿಷ್ಕ್ರಿಯಗೊಳಿಸುವ ಪತ್ರಗಳನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.
ಯಾವುದೇ ಪೂರ್ವ ಸೂಚನೆಯಿಲ್ಲದೆ ಮತ್ತು ಕಾರ್ಡ್ ಹೊಂದಿರುವವರಿಗೆ ಕೇಳಲು ಯಾವುದೇ ಅವಕಾಶವನ್ನು ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವ ಇಂತಹ ಪ್ರಕ್ರಿಯೆಯು ಆಧಾರ್ (ನೋಂದಣಿ) ನಿಯಮ 29 (1) ಅನ್ನು ಸಂಪೂರ್ಣವಾಗಿ ಉಲ್ಲಂಘಿಸಿದಂತಾಗಿದೆ ಎಂದು ಹೇಳಿದ್ದಾರೆ.