ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಆಮ್ ಆದ್ಮಿ ಪಕ್ಷ(ಎಎಪಿ) ಸಿದ್ಧವಾಗಿದೆ ಎಂದು ಆಪ್ ದೆಹಲಿ ಸಂಚಾಲಕ ಗೋಪಾಲ್ ರೈ ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎಎಪಿ ಮತ್ತು ಕಾಂಗ್ರೆಸ್ ನಿನ್ನೆ ಚರ್ಚೆ ನಡೆಸಿತ್ತು. ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆ ಮುಂದುವರೆದಿದೆ. ನಾವು ದೆಹಲಿ, ಪಂಜಾಬ್, ಹರಿಯಾಣ, ಗೋವಾ ಮತ್ತು ಗುಜರಾತ್ನಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ನಮ್ಮ ನಿಲುವಿಗೆ ಬದ್ಧವಾಗಿದ್ದೇವೆ ಎಂದು ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಲು ಬಯಸುತ್ತೇವೆ. ಮುಂದಿನ ಸಭೆಯಲ್ಲಿ ಸೀಟುಗಳ ಬಗ್ಗೆ ಮಾತುಕತೆ ನಡೆಯಲಿದೆ. ಮೈತ್ರಿಯಲ್ಲಿದ್ದಾಗ ಅಧಿಕೃತ ನಿಲುವು ತೆಗೆದುಕೊಳ್ಳಬೇಕು. ಅದಕ್ಕಾಗಿ ಎರಡೂ ಪಕ್ಷಗಳು ಚರ್ಚಿಸಿ ತಮ್ಮ ಸಿದ್ಧತೆಗಳನ್ನು ಮಾಡಿಕೊಳ್ಳುತ್ತವೆ ಎಂದು ಗೋಪಾಲ್ ರೈ ತಿಳಿಸಿದ್ದಾರೆ.