ನವದೆಹಲಿ: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತೀವ್ರ ಗಾಯಗೊಂಡ ಆ್ಯಸಿಡ್ ಸಂತ್ರಸ್ತೆಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿಯು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಬೈಕ್ ನಲ್ಲಿ ಬಂದ ಇಬ್ಬರು ಬಾಲಕಿಯ ಮುಖದ ಮೇಳೆ ಆ್ಯಸಿಡ್ ಎರಚಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿ ಪೊಲೀಸರು ಆಸ್ಪತ್ರೆಗೆ ತೆರಳಿ ಬಾಲಕಿಯನ್ನು ಸಂಪರ್ಕಿಸಿದ್ದಾರೆ. ಪ್ರಾಥಮಿಕ ವರದಿ ಪ್ರಕಾರ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ.
ಘಟನೆಯ ವೇಳೆ ಸಂತ್ರಸ್ತ ಬಾಲಕಿ ತನ್ನ ತಂಗಿಯೊಂದಿಗೆ ಇದ್ದಳು. ತಮಗೆ ತಿಳಿದಿರುವ ಇಬ್ಬರು ವ್ಯಕ್ತಿಗಳ ಮೇಲೆ ಅವಳು ಅನುಮಾನ ವ್ಯಕ್ತಪಡಿಸಿದ್ದಾಳೆ. ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.