ಬೆಂಗಳೂರು ; ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ – 2020ರ ಅಡಿಯಲ್ಲಿ, ವೈದ್ಯಕೀಯ ಶಿಕ್ಷಣ ಮುಂದಿನ ದಿನಗಳಲ್ಲಿ ಸೇರ್ಪಡೆಯಾಗಲಿದೆ ಎಂಬ ವಿಶ್ವಾಸವನ್ನು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ದೇಶಾದ್ಯಂತ ಹಂತ ಹಂತವಾಗಿ ಅನುಷ್ಠಾನಗೊಳ್ಳುತ್ತಿದ್ದು, ಮೊದಲ ಹಂತದಲ್ಲಿ ಆದ್ಯತೆಯ ಮೇರೆಗೆ ಪ್ರಾಥಮಿಕ, ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣದ ಸೇರ್ಪಡೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಪ್ರಸ್ತುತ ವೈದ್ಯಕೀಯ ಶಿಕ್ಷಣ, ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯಲ್ಲಿ ಸೇರ್ಪಡೆಯಾಗಿಲ್ಲ; ಮುಂದಿನ ದಿನಗಳಲ್ಲಿ ಭಾರತೀಯ ವೈದ್ಯಕೀಯ ಆಯೋಗದ ಕಾಯ್ದೆ ಮೂಲಕ ವೈದ್ಯಕೀಯ ಶಿಕ್ಷಣ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸೇರ್ಪಡೆಯಾಗಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.