ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ನಿಗಾ ವಹಿಸಲಾಗಿದ್ದು, ಅದನ್ನು ಮೇಲ್ವಿಚಾರಣೆ ಮಾಡಿ ಅವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಕೋಲ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆಸಿ, ಮತದಾರರ ಓಲೈಕೆ ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ದೂರುಗಳನ್ನು ಸಲ್ಲಿಸಲು ಸಿ- ವಿಜಿಲ್ ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗಿದೆ. ಈ ಆಪ್ ಮೂಲಕ ಜಿಲ್ಲೆಯ ಚುನಾವಣೆಗೆ ಸಂಬಂಧಿಸಿದ ಉಲ್ಲಂಘನೆ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಫೋಟೋ ಹಾಗೂ ವೀಡಿಯೋ ಮೂಲಕ ದೂರು ಸಲ್ಲಿಸಬಹುದು ಎಂದು ಹೇಳಿದ್ದಾರೆ.
ಇನ್ನು ಚುನಾವಣಾ ಪೂರ್ವ ತಪಾಸಣೆ ವೇಳೆ 10 ಲಕ್ಷ ರೂ., 200 ಲೀಟರ್ ಮದ್ಯ ಮತ್ತು 65 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.