ಹೊಸದಿಲ್ಲಿ: ಅದಾನಿ ಸಮೂಹಗಳ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸೋಮವಾರ ಸಂಸತ್’ನ ಉಭಯ ಸದನಗಳಲ್ಲೂ ಪ್ರತಿಪಕ್ಷಗಳು ಧರಣಿ ನಡೆಸಿ ಕೋಲಾಹಲ, ಗದ್ದಲ ಸೃಷ್ಟಿಸಿದ್ದರಿಂದ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.
ಸೋಮವಾರ ಬೆಳಗ್ಗೆ ಉಭಯ ಸದನಗಳು ಸಮಾವೇಶಗೊಂಡಾಗ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಘೋಷಣೆ ಕೂಗಿದರು. ಆಗ ಕಲಾಪವನ್ನು ಮಧ್ಯಾಹ್ನಕ್ಕೆ ಹಾಗೂ ಮತ್ತೆ ಸಮಾವೇಶಗೊಂಡಾಗ ಅದೇ ಪರಿಸ್ಥಿತಿ ಮುಂದುವರಿದಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಖರ್ಗೆ, ರಾಷ್ಟ್ರಪತಿಗಳ ಭಾಷಣದ ಬಗ್ಗೆ ಮಾತನಾಡಲು ವಿರೋಧ ಪಕ್ಷಗಳು ತಯಾರಿವೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿ ಹಾಗೂ ಹಿಂಡನ್ ಬರ್ಗ್ ವರದಿ ಬಗ್ಗೆ ಪ್ರತಿಕ್ರಿಯೆ ನೀಡಬೇಕು. ಅದೇ ನಮ್ಮ ಮೊದಲ ಆದ್ಯತೆ ಎಂದು ಹೇಳಿದ್ದಾರೆ.