ಬೆಂಗಳೂರು: ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರಿ ಜಾಹೀರಾತುಗಳನ್ನು ಹಾಕುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಸಿದ್ದು ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ತೆಲಂಗಾಣ ರಾಜ್ಯದಲ್ಲಿ ಪ್ರಸಾರವಾಗುವ ಪತ್ರಿಕೆಗಳಲ್ಲಿ ರಾಜ್ಯ ಸರ್ಕಾರದ ಕಲ್ಯಾಣ ಯೋಜನೆಗಳು ಮತ್ತು ಸಾಧನೆಗಳನ್ನು ಎತ್ತಿ ತೋರಿಸುವ ಜಾಹೀರಾತುಗಳನ್ನು ನೀಡುವ ಈ ಕ್ರಮವು ಆಯೋಗದ ಮೇಲಿನ ನಿರ್ದೇಶನಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
ನವೆಂಬರ್ 28 ರೊಳಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಕಾರಣವಾದ ಸಂದರ್ಭಗಳ ಬಗ್ಗೆ ವಿವರಣೆ ನೀಡಬೇಕು ಎಂದು ಆಯೋಗವು ಕರ್ನಾಟಕ ರಾಜ್ಯ ಸರ್ಕಾರವನ್ನು ಕೇಳಿದೆ.
ಸಿದ್ದರಾಮಯ್ಯ ಸರ್ಕಾರ ಹಲವಾರು ಪತ್ರಿಕೆಗಳ ಹೈದರಾಬಾದ್ ಆವೃತ್ತಿಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದೆ ಎಂದು ಬಿಜೆಪಿ ಮತ್ತು ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.