ಹಿರಿಯ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ನಿಧನ | ಗಣ್ಯರ ಸಂತಾಪ

Prasthutha: November 25, 2020

ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಬುಧವಾರ ನಸುಕಿನ ವೇಳೆ ನಿಧನರಾಗಿದ್ದಾರೆ. ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ 3:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ನ ಹಿರಿಯ ನಾಯಕರೆಲ್ಲರ ಆಪ್ತರಾಗಿದ್ದ ಅಹ್ಮದ್ ಪಟೇಲ್ ಗೆ 71 ವರ್ಷಗಳಾಗಿದ್ದವು. ಅ.1ರಂದು ಅಹ್ಮದ್ ಪಟೇಲ್ ಅವರಿಗೆ ಕೋವಿಡ್ 19 ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಗುರುಗಾಂವ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಅವರು ಮೃತರಾಗಿದ್ದಾರೆ. ತಮ್ಮ ತಂದೆಯ ಸಾವನ್ನು ಪುತ್ರ ಫೈಸಲ್ ಅಹ್ಮದ್ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಖಜಾಂಚಿ, ರಾಜ್ಯ ಸಭಾ ಸದಸ್ಯ, ಸೋನಿಯಾ ಗಾಂಧಿ ಅವರಿಗೆ ರಾಜಕೀಯ ಕಾರ್ಯದರ್ಶಿಯೂ ಆಗಿದ್ದರು. ಗುಜರಾತ್ ನ ಪ್ರಭಾವಿ ಕಾಂಗ್ರೆಸ್ ನಾಯಕರಲ್ಲಿ ಅಹ್ಮದ್ ಕೂಡ ಒಬ್ಬರಾಗಿದ್ದಾರೆ. ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಪಕ್ಷದ ರಾಹುಲ್‌ ಗಾಂಧಿ ಸೇರಿದಂತೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಅಹ್ಮದ್‌ ಪಟೇಲ್‌ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ,ಅಹ್ಮದ್ ಪಟೇಲ್‌ ಅವರು ತಮ್ಮ ಜೀವನವನ್ನು ಸಾರ್ವಜನಿಕರ ಸೇವೆಗೆ ಮುಡಿಪಾಗಿಟ್ಟಿದ್ದರು. ಕುಶಾಗ್ರಮತಿಯಾಗಿದ್ದ ಅವರು ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಸಾಕಷ್ಟು ಪಾತ್ರವಹಿಸಿದ್ದರು. ಅವರ ಪುತ್ರನೊಂದಿಗೆ ಮಾತನಾಡಿ ಸಂತಾಪ ಸೂಚಿಸಿದ್ದೇನೆ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಇಂದು ದುಃಖದ ದಿನವಾಗಿದೆ. ಅಹ್ಮದ್‌ ಪಟೇಲ್‌ ಅವರು ಕಾಂಗ್ರೆಸ್‌ ಪಕ್ಷದ ಆಧಾರ ಸ್ತಂಭವಾಗಿದ್ದರು. ಸಂಕಷ್ಟ ಸಮಯದಲ್ಲಿ ಪಕ್ಷದ ಪರವಾಗಿ ನಿಂತು ಸಮಸ್ಯೆಗಳನ್ನು ಬಗೆಹರಿಸಿದ್ದರು. ಅವರು ಕಾಂಗ್ರೆಸ್‌ ಪಕ್ಷದ ಆಸ್ತಿಯಾಗಿದ್ದರು ಎಂದು ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ. ಅಹ್ಮದ್‌ ಪಟೇಲ್‌ ಅವರು ಕಾಂಗ್ರೆಸ್‌ ಪಕ್ಷದ ಶಕ್ತಿಯಾಗಿದ್ದರು. ಅವರು ನಮಗೆ ಮಾರ್ಗದರ್ಶಕರಾಗಿ, ಸ್ನೇಹಿತರಾಗಿದ್ದರು. ಅವರ ನಿಧನದಿಂದ ಪಕ್ಷ ಬಡವಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!