ಬೆಂಗಳೂರು: ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ಆದರೆ, ಅವರ ಪಕ್ಷದ ಸಂಸದರೊಬ್ಬರು ಪದೇ ಪದೇ ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಅನಂತಕುಮಾರ್ ಹೆಗಡೆ ಅವರ ಹೇಳಿಕೆಯಿಂದ ದೂರ ಇದ್ದೇವೆ ಎಂದು ಬಿಜೆಪಿ ನಾಯಕರು ಹೇಳಿದರೆ ಸಾಲುವುದಿಲ್ಲ. ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು. ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದರು.