ವಿಜಿನಗರಂ: ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡವರು ಆಸ್ಪತ್ರೆಯಲ್ಲಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.
ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ.
ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 10 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಅವರ ಕಚೇರಿ ತಿಳಿಸಿದೆ. ಬೇರೆ ರಾಜ್ಯಗಳ ಜನರು ಸಾವನ್ನಪ್ಪಿದರೆ, ದುಃಖಿತ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ.50,000 ಪರಿಹಾರವನ್ನು ನೀಡಲಾಗುತ್ತದೆ ಎಂದು ಸಿಎಂಒ ಕಚೇರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ತಿಳಿಸಿದೆ.