ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆ ಚುರುಕಾಗುತ್ತಿರುವ ಬೆನ್ನಲ್ಲೇ ಬಿಜೆಪಿ – ಜೆಡಿಎಸ್ ನಡುವೆ ಹೊಂದಾಣಿಕೆ ಏರ್ಪಡುವ ಸಾಧ್ಯತೆಗಳು ದಟ್ಟವಾಗಿವೆ. ಜಾತ್ಯತೀತ ಜನತಾದಳ – ಬಿಜೆಪಿ ನಡುವೆ ಮತ್ತೊಂದು ಸುತ್ತಿನ ದೋಸ್ತಿಗೆ ವೇದಿಕೆ ಸಜ್ಜಾಗುತ್ತಿದೆ. ಈ ಮೂಲಕ ಕಾಂಗ್ರೆಸ್ ಗೆ ಚಳ್ಳೆಹಣ್ಣು ತಿನ್ನಿಸಲು ಜೆಡಿಎಸ್ ನಾಯಕರು ಕಾರ್ಯತಂತ್ರ ಹೆಣೆದಿದ್ದಾರೆ. ಜೆಡಿಎಸ್ ಜತೆ ತೆರಳುವಂತೆ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಸಂದೇಶ ರವಾನಿಸಿದ್ದಾರೆ.
ಇತ್ತೀಚೆಗೆ ರಾಜ್ಯದ ವಿವಿಧೆಡೆ ನಡೆದ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಕಡೆಗಳಲ್ಲಿ ಮೈತ್ರಿ ಮಾಡಿಕೊಳ್ಳುವ ಜತೆಗೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿಯ ಬೆಂಬಲಕ್ಕೆ ಜೆಡಿಎಸ್ ನಿಲ್ಲುವ ನಿರೀಕ್ಷೆಯಿದೆ.
ಬಿಜೆಪಿ ಸರ್ಕಾರಕ್ಕೆ ಎಲ್ಲಾ ರೀತಿಯಿಂದಲೂ ನೆರವಾಗಲು ಜೆಡಿಎಸ್ ನಾಯಕರು ಈಗಾಗಲೇ ಭರವಸೆ ನೀಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಬಿಜೆಪಿಗೆ ಬೆಂಬಲ ನೀಡಲು ಆಂತರಿಕವಾಗಿ ತೀರ್ಮಾನಿಸಿದ್ದಾರೆ.
ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಚರ್ಚೆ ನಡೆಸಿದ ಬೆನ್ನಲ್ಲೇ ಇಂದು ಸಂಜೆ ಕಂದಾಯ ಸಚಿವ ಆರ್. ಅಶೋಕ ಬಿಡದಿಯ ಫಾರ್ಮ್ ಹೌಸ್ ನಲ್ಲಿ ಕುಮಾರಸ್ವಾಮಿ ಅವರನ್ನು ಶನಿವಾರ ಸಂಜೆ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ, ಅಧಿವೇಶನದಲ್ಲಿ ಸಹಕಾರ, ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಸೇರಿದಂತೆ ಹಲವು ವಿಷಯಗಳ ಕುರಿತು ಈ ನಾಯಕರು ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ.
ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಆರ್. ಅಶೋಕ, ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಕಲ್ಬುರ್ಗಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿವೆ ಎಂದು ಸ್ಪಷ್ಟಪಡಿಸಿದರು.
ಇತ್ತೀಚಿಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು ಮೈತ್ರಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಸಚಿವ ಆರ್ ಅಶೋಕ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಜೆಡಿ ಎಸ್ ಮಾಜಿ ಸಚಿವ ಸಾ ರಾ ಮಹೇಶ್ ಅವರ ಆಹ್ವಾನದ ಮೇರೆಗೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ದೊಡ್ಡಬಳ್ಳಾಪುರ ಹಾಗೂ ಕಲ್ಬುರ್ಗಿ ಪಾಲಿಕೆಗಳಲ್ಲಿ ಮೈತ್ರಿ ಆಡಳಿತ ನಡೆಸುವ ಕುರಿತಂತೆ ಒಂದು ಗಂಟೆಗಳ ಕಾಲ ಚರ್ಚೆ ನಡೆಸಿರುವುದಾಗಿ ತಿಳಿಸಿದರು.
“ದೊಡ್ಡಬಳ್ಳಾಪುರದಲ್ಲಿ ಜೆಡಿ ಎಸ್ ಜೊತೆಗೆ ಮೈತ್ರಿ ಬಹುತೇಕ ಖಚಿತವಾಗಿದೆ. ಈ ಕುರಿತು ಕುಮಾರಸ್ವಾಮಿಯವರಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ಕಲ್ಬುರ್ಗಿ ಪಾಲಿಕೆ ಮೈತ್ರಿ ವಿಚಾರ ಕುರಿತು ಸೋಮವಾರ ಸಂಜೆಯ ವೇಳೆಗೆ ದೇವೇಗೌಡರ ಜೊತೆಗಿನ ಸಭೆಯ ನಂತರ ಸ್ಪಷ್ಟ ತೀರ್ಮಾನ ತಿಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
“ಕಾಂಗ್ರೆಸ್ ಜೊತೆಗಿನ ಮೈತ್ರಿ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ದೇವೇಗೌಡರ ಜತೆ ಮಾತನಾಡಿರಬಹುದು. ಆದರೆ ಸಿದ್ದರಾಮಯ್ಯ ಅವರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರು ಜೆಡಿಎಸ್ ಜೊತೆಗಿನ ಹೊಂದಾಣಿಕೆಯ ಕುರಿತಂತೆ ಪ್ರಸ್ತಾಪವನ್ನೇ ಮಾಡಿಲ್ಲ ಎಂದರು.
ಆದರೆ ನಮ್ಮಲ್ಲಿ ಪಕ್ಷದ ವರಿಷ್ಠರಿಂದ ಜೆಡಿಎಸ್ ಜೊತೆಗೆ ಮೈತ್ರಿ ಮಾತುಕತೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಸಂದರ್ಭ ಬಂದರೆ ಮಾಜಿ ಪ್ರಧಾನಿ ದೇವೇಗೌಡರ ಜೊತೆಗೂ ಮಾತುಕತೆ ನಡೆಸಲಾಗುವುದು. ದೊಡ್ಡಬಳ್ಳಾಪುರ ಹಾಗೂ ಕಲ್ಬುರ್ಗಿ ಎರಡೂ ಕಡೆಗೆ ಮೈತ್ರಿ ಫಲಪ್ರದವಾಗುವ ಸಂಪೂರ್ಣ ವಿಶ್ವಾಸವಿದೆ”, ಎಂದು ತಿಳಿಸಿದರು.