ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಕಬಳಿಕೆಗೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಸಲ್ಲಿಸಿರುವ ವಿಶೇಷ ವರದಿಯನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ರಾಜ್ಯ ಸಚಿವ ಸಂಪುಟ 2022ರ ಸೆಪ್ಟೆಂಬರ್ 21ರಂದು ತೀರ್ಮಾನ ತೆಗೆದುಕೊಂಡಿದೆ ಎಂದು ಕರ್ನಾಟಕ ಹೈಕೋರ್ಟ್ಗೆ ರಾಜ್ಯ ಸರ್ಕಾರವು ಗುರುವಾರ ಮಾಹಿತಿ ನೀಡಿದೆ.
ಮಾಜಿ ಸಚಿವ ಎಸ್ ಕೆ ಕಾಂತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಅನ್ವರ್ ಮಾಣಿಪ್ಪಾಡಿ ಸಲ್ಲಿಸಿದ್ದ ವಿಶೇಷ ವರದಿಯನ್ನು ರಾಜ್ಯ ಉಭಯ ಸದನದಲ್ಲಿ ಮಂಡಿಸಲು 2022ರ ಸೆಪ್ಟೆಂಬರ್ 21ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸದನದಲ್ಲಿ ಮಂಡಿಸಿದ ನಂತರ ವಿಶೇಷ ವರದಿ ಕುರಿತು ಸರ್ಕಾರವು ತೀರ್ಮಾನ ತೆಗೆದುಕೊಳ್ಳಲಿದೆ. ಈ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು. ಅದಕ್ಕಾಗಿ ನಾಲ್ಕು ವಾರ ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ವಕೀಲೆ ಪ್ರತಿಭಾ ಹೊನ್ನಾಪುರ ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ಪೀಠವು ಅರ್ಜಿ ವಿಚಾರಣೆಯನ್ನು ಮುಂದೂಡಿತು.
ವಿಶೇಷ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿದ ಬಳಿಕ ಕೈಗೊಂಡ ಕ್ರಮಗಳು ಹಾಗೂ ವರದಿಯನ್ನು ಯಾವಾಗ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೆಪ್ಟೆಂಬರ್ 28ರಂದು ನಿರ್ದೇಶಿಸಿತ್ತು.
ಅಲ್ಪಸಂಖ್ಯಾತರ ಆಯೋಗದ ವಿಶೇಷ ವರದಿಯಲ್ಲಿ ಮಾಡಲಾದ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ವಕ್ಫ್ ಮಂಡಳಿಗೆ ನಿರ್ದೇಶನ ನೀಡಬೇಕು. ವರದಿಯಲ್ಲಿನ ಅಂಶಗಳನ್ನು ಆಧರಿಸಿ, ಸಿಬಿಐಗೆ ತನಿಖೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ತನಿಖೆಯ ಮೇಲ್ವಿಚಾರಣೆಯನ್ನು ಹೈಕೋರ್ಟ್ ಮಾಡಬೇಕು. 2016ರಲ್ಲಿ ಲೋಕಾಯುಕ್ತ ಸಂಸ್ಥೆಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಸೇರಿದಂತೆ ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತ ಬಳಿ ಇರುವ ಎಲ್ಲಾ ದಾಖಲೆಗಳನ್ನು ನ್ಯಾಯಾಲಯ ತರಿಸಿಕೊಳ್ಳಬೇಕು ಎನ್ನುವುದು ಅಜಿರ್ದಾರರ ಕೋರಿಕೆಯಾಗಿದೆ.
(ಕೃಪೆ: ಬಾರ್ & ಬೆಂಚ್)