ಬೆಂಗಳೂರು: ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1 ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ವಿಧಾಸಭೆ ಚುನಾವಣೆ ಬಂತು ಅಂತ ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್ ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದ್ದೇವೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ಗಳನ್ನು ವಿತರಿಸುವ ತೀರ್ಮಾನ ಕೈಗೊಂಡಿದ್ದೇವೆ. ಇದರ ಆದೇಶ ಹೊರಡಿಸಲಾಗಿದೆ. ಈ ಕೆಲಸ ಮುಗಿದ ನಂತರ ಹೊಸ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.