ಬಾಂಗ್ಲಾದೇಶಿ, ರೋಹಿಂಗ್ಯನ್ನರು ಮಸೀದಿ, ಮದ್ರಸಾಗಳಲ್ಲಿ ವಾಸವಾಗಿರುವ ಪ್ರಕರಣಗಳು ವರದಿಯಾಗಿಲ್ಲ: ಗೃಹ ಸಚಿವ ಜ್ಞಾನೇಂದ್ರ

Prasthutha|

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಯಾವುದೇ ಬಾಂಗ್ಲಾದೇಶಿ ನಾಗರಿಕರು ಅಥವಾ ರೋಹಿಂಗ್ಯಾ ಮುಸ್ಲಿಮರು, ಮಸೀದಿ ಅಥವಾ ಮದರಸಾಗಳಲ್ಲಿ ವಾಸವಾಗಿರುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

- Advertisement -

ಆದರೆ ಅಕ್ರಮ ವಲಸಿಗರು ಆಶ್ರಯ ಪಡೆದಿರುವುದನ್ನು ನಿಯಂತ್ರಿಸಲು ಎಲ್ಲಾ ನಗರ ಮತ್ತು ಜಿಲ್ಲಾ ಮಟ್ಟದಲ್ಲಿ “ಸ್ಪೆಷಲ್ ಟಾಸ್ಕ್ ಫೋರ್ಸ್” ರಚಿಸಿದ್ದು, ಈ ಬಗ್ಗೆ, ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಸ್ಥಳೀಯ ಪೊಲೀಸರು ಮತ್ತು ಸ್ಪೆಷಲ್ ಟಾಸ್ಕ್ ಫೋರ್ಸ್ ಸಿಬ್ಬಂದಿಯವರು ನಿರಂತರವಾಗಿ ಕಾರ್ಯಪ್ರವೃತ್ತರಾಗಿರುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ವಿದೇಶಿಯರನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಹಾಗೂ ಇದಕ್ಕಾಗಿ ವಿಶೇಷ ಕಾರ್ಯಾಚರಣೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಸಚಿವರು, ಸದನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಭಾರತೀಯ ಜನತಾ ಪಕ್ಷದ ಪಿ ಎಂ ಮುನಿರಾಜು ಗೌಡರ, ಅವರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ಅನಧಿಕೃತವಾಗಿ ಹಾಗೂ ಅಕ್ರಮವಾಗಿ ನೆಲಸಿರುವ ವಿದೇಶಿ ಪ್ರಜೆಗಳನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

- Advertisement -

ಅಕ್ರಮ ವಲಸಿಗರ ವಿರುದ್ಧ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದ್ದು “ಕರ್ನಾಟಕ ರಾಜ್ಯ ಅಕ್ರಮ ವಲಸಿಗರ ನೆಲೆಯಾಗಲು ಬಿಡುವುದಿಲ್ಲ” ಎಂದು ಹೇಳಿದರು. ರಾಜ್ಯದಲ್ಲಿ ಅಕ್ರಮ ವಲಸಿಗರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಬೆಂಗಳೂರು ನಗರದಲ್ಲಿ ಒಬ್ಬರು, ಹಾಗೂ ಕೆ ಜಿ ಎಫ್ ಪಟ್ಟಣದಲ್ಲಿ ಒಬ್ಬರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು, ಸದನದಲ್ಲಿ ಸ್ಪಷ್ಟಪಡಿಸಿದರು.

ಸದಸ್ಯರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಅಕ್ರಮ ವಲಸಿಗರು ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸದೆ ದೇಶ ತೊರೆದಿರುವ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದು ಹೇಳಿದ್ದಾರೆ.



Join Whatsapp