ದೆಹಲಿ: ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಪ್ರಜಾಪ್ರಭುತ್ವವು ತನ್ನದೇ ಆದ ಹಾದಿಯನ್ನು ತೆಗೆದುಕೊಳ್ಳಲಿ, ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ.
ಕಳೆದ ವಾರ, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಒಂದು ಮನವಿ ಸಲ್ಲಿಸಲಾಯಿತು.
ಸಿಎಂ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ಅವರಿಗೆ ಬಿಟ್ಟಿದ್ದು ಎಂದು ದೆಹಲಿ ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ. ರಾಷ್ಟ್ರಪತಿ ಆಳ್ವಿಕೆ ಅಥವಾ ರಾಜ್ಯಪಾಲರ ಆಳ್ವಿಕೆಯನ್ನು ನ್ಯಾಯಾಲಯವು ಹೇರಿರುವ ಯಾವುದೇ ಪೂರ್ವನಿದರ್ಶನವಿದೆಯೇ? ಎಂದು ಪೀಠ ಹೇಳಿದೆ.