Home ಟಾಪ್ ಸುದ್ದಿಗಳು ಅತಿಥಿ ಶಿಕ್ಷಕಿ ಮೇಲೆ ಹಲ್ಲೆ ಪ್ರಕರಣ: ಗಾಯಾಳು ಶಿಕ್ಷಕಿಯನ್ನು ಭೇಟಿ ಮಾಡಿದ ಶಿಕ್ಷಣ ಸಚಿವ ಬಿ.ಸಿ....

ಅತಿಥಿ ಶಿಕ್ಷಕಿ ಮೇಲೆ ಹಲ್ಲೆ ಪ್ರಕರಣ: ಗಾಯಾಳು ಶಿಕ್ಷಕಿಯನ್ನು ಭೇಟಿ ಮಾಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಹುಬ್ಬಳ್ಳಿ: ಅತಿಥಿ ಶಿಕ್ಷಕ ನಡೆಸಿದ ಅಮಾನವೀಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತಿಥಿ ಶಿಕ್ಷಕಿ ಗೀತಾ ಯಲ್ಲಪ್ಪ ಅವರನ್ನು ಭೇಟಿ ಮಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ‌ ಸಚಿವರಾದ ಬಿ.ಸಿ. ನಾಗೇಶ್ ಅವರು ಆರೋಗ್ಯ ವಿಚಾರಿಸಿದರು.

ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಗಾಯಾಳು ಶಿಕ್ಷಕಿಯ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದು, ಶಿಕ್ಷಕಿಯ ಕುಟುಂಬದವರೊಂದಿಗೆ ಮಾತನಾಡಿ ಧೈರ್ಯ ತುಂಬಿದರು.

ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಆರೋಪಿ ಮುತ್ತಪ್ಪ ಹಡಗಲಿ, ಶಾಲೆಯ 4ನೇ ತರಗತಿ ವಿದ್ಯಾರ್ಥಿ ಭರತ್ ಮೇಲೆ ಸೋಮವಾರ  ಬೆಳಿಗ್ಗೆ ಹಲ್ಲೆ ನಡೆಸಿ, ಒಂದನೇ ಮಹಡಿಯಿಂದ ಕೆಳಗೆ ತಳ್ಳಿದ್ದ. ಬಳಿಕ ಶಿಕ್ಷಕಿ ಗೀತಾ ಯಲ್ಲಪ್ಪ ಅವರ ಮೇಲೂ ಸಲಾಕೆಯಿಂದ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಭರತ್ ಮೃತಪಟ್ಟಿದ್ದಾನೆ. ಶಿಕ್ಷಕಿ ಗೀತಾ ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಾರಿಯಾಗಿರುವ ಆರೋಪಿ ಶಿಕ್ಷಕನ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಶಾಲೆಯಲ್ಲಿ ನಡೆದಿರುವ ಈ ಘಟನೆ ಅತ್ಯಂತ ದುರದೃಷ್ಟಕರ. ಶಾಲೆಯ ಆವರಣದಲ್ಲಿ ಇಂತಹ ಘಟನೆಗಳನ್ನು ಊಹಿಸಲು ಕೂಡಾ ಸಾಧ್ಯವಿಲ್ಲ. ಘಟನೆಯಿಂದ ಆತಂಕಗೊಂಡಿರುವ ಶಾಲೆಯ ಮಕ್ಕಳು ಮತ್ತು ಶಿಕ್ಷಕರಿಗೆ ಕೌನ್ಸಿಲಿಂಗ್ ಮಾಡಿ ಧೈರ್ಯ ತುಂಬಲಾಗುತ್ತದೆ. ಘಟನೆಗೆ ಕಾರಣ ಏನು ಎಂಬುದು ಆರೋಪಿಯ ಬಂಧನದ ಬಳಿಕ ತಿಳಿದು ಬರಲಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಸಚಿವ ಬಿ.ಸಿ. ನಾಗೇಶ್ ಅವರು ಮಾಹಿತಿ ನೀಡಿದರು.

Join Whatsapp
Exit mobile version