ಪಟ್ನಾ: ದೇಶಾದ್ಯಂತ ಸಂಭ್ರಮದ ಹೋಳಿ ಆಚರಣೆಯ ಮಧ್ಯೆ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬರಿಗೆ ಆ್ಯಸಿಡ್ ಎರಚಿದ್ದು, ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಅಧಿಕಾರಿಗಳು ತಿಳಿಸಿದ್ದಾರೆ.
ನದಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಸುಮಾರು 5 ಗಂಟೆಗೆ ನಡೆದ ಘಟನೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳ ತಂಡವೊಂದು ಆ್ಯಸಿಡ್ ದಾಳಿ ನಡೆಸಿದ್ದು, ದಾಳಿಯಿಂದಾಗಿ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ನಳಂದಾ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿ ಕೃಷ್ಣ ಮುರಾರಿ ಪ್ರಸಾದ್ ತಿಳಿಸಿದ್ದಾರೆ.
ಸದ್ಯ ಆ್ಯಸಿಡ್ ದಾಳಿಗೊಳಗಾಗಿ ಮೃತಪಟ್ಟವನ ಗುರುತು ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವ್ಯಕ್ತಿಯ ಮೇಲಿನ ದಾಳಿಯ ಹಿಂದಿನ ನಿಖರ ಕಾರಣ ಇನ್ನೂ ಪತ್ತೆಹಚ್ಚಲಾಗಿಲ್ಲ, ಆದರೂ ಶೀಘ್ರವೇ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರ ಮೇಲೆ ಆಕ್ರೋಶಿತ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಈ ಮಧ್ಯೆ ಆರೋಪಿಗಳು ಕೂಡ ಇದೇ ಗ್ರಾಮದವರಾಗಿದ್ದು, ಗ್ರಾಮಸ್ಥರು ಅವರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.