ಶಿವಮೊಗ್ಗ: ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಲು ಸಂಘಪರಿವಾರದ ಕಾರ್ಯಕರ್ತರು ಯತ್ನಿಸಿದ ಪರಿಣಾಮ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ನಗರದಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ್ ಫೋಟೋವನ್ನು ಸಂಘಪರಿವಾರ ಕಾರ್ಯಕರ್ತರು ಹಾಕಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಯುವಕರ ಗುಂಪೊಂದು ಅದನ್ನು ತೆರವುಗೊಳಿಸಿದೆ. ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಲಘುಲಾಠಿ ಪ್ರಹಾರ ನಡೆಸಿ ಎಲ್ಲರನ್ನೂ ಚದುರಿಸಿದ್ದಾರೆ.
ಫ್ಲೆಕ್ಸ್ ತೆರವುಗೊಳಿಸಿದ್ದನ್ನು ಖಂಡಿಸಿ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು. ಈ ವೇಳೆ ಮತ್ತೊಂದು ಗುಂಪು ಆಕ್ಷೇಪ ವ್ಯಕ್ತಪಡಿಸಿತು. ಎರಡೂ ಗುಂಪುಗಳು ಪರಸ್ಪರ ಘೋಷಣೆ ಕೂಗಿದವು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಎರಡೂ ಗುಂಪುಗಳನ್ನು ಚದುರಿಸಿದರು.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು , ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಭೇಟಿ ನೀಡಿದ್ದು, ಮುಂಜಾಗೃತಾ ಕ್ರಮವಾಗಿ ನಗರದಲ್ಲಿ ಇಂದು ಮತ್ತು ನಾಳೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.