Home ಟಾಪ್ ಸುದ್ದಿಗಳು ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ


ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವರು ಇಂದು ಈ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದರು. ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ರಾಜ್ಯದಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಧ್ವಜ ವಿತರಣೆ ಕಾರ್ಯ ನಡೆಯುತ್ತಿದೆ. ಆಗಸ್ಟ್ 13 ರಂದೇ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ವಾತಾವರಣ ನಿರ್ಮಾಣವಾಗಬೇಕು ಎಂದು ಸೂಚಿಸಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸರ್ಕಾರಿ ಕಚೇರಿಗಳಲ್ಲಿ ಈ ಮೂರು ದಿನಗಳಂದು ಪ್ರತಿ ದಿನ ಬೆಳಿಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಇಳಿಸಬೇಕು. ಮನೆಗಳಲ್ಲಿ ಆಗಸ್ಟ್ 13 ರಂದು ಧ್ವಜಾರೋಹಣ ಮಾಡಿದರೆ, 15ರ ವರೆಗೆ ಇರಿಸಬಹುದಾಗಿದೆ ಎಂದು ತಿಳಿಸಿದರು.

ಮುಖ್ಯ ಕಾರ್ಯದರ್ಶಿಗಳು ಮತ್ತೊಮ್ಮೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ನಿಗದಿತ ಗುರಿ ಸಾಧಿಸಲು ಜಿಲ್ಲಾಡಳಿತಗಳಿಗೆ ಮಾರ್ಗದರ್ಶನ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಇದರೊಂದಿಗೆ ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥ, ಆಯಾ ಜಿಲ್ಲೆಗಳ ಸ್ವಾತಂತ್ರ್ಯ ಹೋರಾಟಗಾರರನ್ನು ಆಗಸ್ಟ್ 9 ರಿಂದ 14ರ ನಡುವೆ, ಅವರ ಮನೆಗೆ ತೆರಳಿ ಸನ್ಮಾನಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರೂ ಇದರಲ್ಲಿ ಭಾಗಿಯಾಗುವಂತೆ ಸೂಚಿಸಿದರು.
ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ವಿ.ಸೋಮಣ್ಣ, ಸಿ.ಸಿ ಪಾಟೀಲ, ಬಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಆನಂದ್ ಸಿಂಗ್, ನಾರಾಯಣಗೌಡ, ಸುನಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಮತ್ತು ಇತರ ಹಿರಿಯ ಅಧಿಕಾರಿಗಳು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು.

Join Whatsapp
Exit mobile version