ಬೆಂಗಳೂರು: ರಾಜ್ಯದ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಕಸಿದುಕೊಂಡು ಎಲ್ಲಾ ವೈಫಲ್ಯಗಳಿಗೆ ಕಾರಣವಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡದಿದ್ದರೆ ಮುಖ್ಯಮಂತ್ರಿಗಳು ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕು ಎಂದು ಖ್ಯಾತ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ. ಆಗ್ರಹಿಸಿದ್ದಾರೆ.
ಶಿಕ್ಷಣ ಸಚಿವರು ಅಂತಾರಾಷ್ಟ್ರೀಯ ಕಾನೂನು, ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ನು ಹಾಗೂ ಸಂವಿಧಾನ ಆಶಯಗಳನ್ನು ಗಾಳಿಗೆ ತೂರಿದ್ದು, ವಿಶ್ವಸಂಸ್ಥೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಭಾರತವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿ ಘೋರ ಅಪರಾಧವೆಸಗಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ಮಕ್ಕಳ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ ಎಂದರು.
ಬಹುತ್ವ ಕರ್ನಾಟಕದ ಮುಖ್ಯಸ್ಥೆ ಮೈತ್ರೀಯಿ ಕೃಷ್ಣನ್ ಮಾತನಾಡಿ, ರಾಜ್ಯಾದ್ಯಂತ ಎಲ್ಲಾ ಸರಕಾರಿ ಶಾಲೆಗಳಲ್ಲಿ ವಾರದಲ್ಲಿ ೫ ದಿನ ಮೊಟ್ಟೆಯನ್ನು ನೀಡಬೇಕು. ಎಲ್ಲಾ ಮಕ್ಕಳು ಶಾಲೆಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಸರಕಾರವು ವಿಶೇಷ ಕ್ರಮಗಳನ್ನು ಜಾರಿಗೊಳಿಸಬೇಕು. ಕಲಿಕೆಯ ಅಂತರವನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡಿನಂತೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.