ಬೀದರ್: ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ನಡೆಸುತ್ತಿರುವ ಪಠ್ಯೇತರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಮಾಜಿ ಸಚಿವ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಹಾಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಮಂಗಳವಾರ ಪತ್ರ ಬರೆದಿರುವ ಅವರು, ನನ್ನ ವಿಧಾನಸಭಾ ಕ್ಷೇತ್ರದ ಕಮಠಾಣಾ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್.ಎಸ್.ಎಸ್) ರವರ ಶಿಬಿರಕ್ಕೆ ಅನುಮತಿ ನೀಡಿದ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಬೇಕು ಮತ್ತು ಮುಂದಿನ ದಿನಗಳಲ್ಲಿ ಸರ್ಕಾರಿ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಈ ರೀತಿಯ ಶಿಬಿರಗಳು ನಡೆಯದಂತೆ ತಡೆಗಟ್ಟಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ಅ.8ರಿಂದ 16ನೇ ತಾರೀಖಿನವರೆಗೂ 9 ದಿನಗಳ ಕಾಲ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಮಠಾಣಾ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್.ಎಸ್.ಎಸ್) ದಿಂದ ಶಿಬಿರವನ್ನು ಆಯೋಜಿಸಿ, ಮಕ್ಕಳನ್ನು ಪತ್ಯೇತರ ಚಟುವಟಿಕೆಗಳ ಕಡೆಗೆ ಸೆಳೆಯುವ ಕೆಲಸ ಮಾಡಲಾಗುತ್ತಿದೆ. ಈ ಹಿಂದೇ ಬೇರೆ ಬೇರೆ ಕಡೆಗಳಲ್ಲಿ ಶಿಬಿರಗಳನ್ನು ನಡೆಸುತ್ತಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್.ಎಸ್.ಎಸ್) ಇತ್ತೀಚೆಗೆ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ವಸತಿ ಶಾಲೆಗಳಿಗೆ ಲಗ್ಗೆ ಇಡುತ್ತಿದೆ. ನನ್ನ ಕ್ಷೇತ್ರದಲ್ಲಿ ಈ ರೀತಿಯ ಘಟನೆ ನಡೆದಿರುವುದನ್ನು ನಾನು ಖಂಡಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಆದುದರಿಂದ, ನನ್ನ ಮತ ಕ್ಷೇತ್ರದ ಕಮಠಾಣಾ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರ್.ಎಸ್.ಎಸ್ ನವರು ಶಿಬಿರ ನಡೆಸಲು ಅನುಮತಿ ನೀಡಿದ ಬಗ್ಗೆ ತನಿಖೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಮತ್ತು ಮುಂದಿನ ದಿನಗಳಲ್ಲಿ ರಾಜ್ಯದ ಸರ್ಕಾರಿ ಸ್ಥಳಗಳು, ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಈ ರೀತಿಯ ಶಿಬಿರಗಳಿಗೆ ಅನುಮತಿ ನೀಡಬಾರದೆಂದು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದ್ದಾರೆ.