ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣ | ಅಮಾಯಕರ ಬಿಡುಗಡೆಗೆ ಒತ್ತಾಯಿಸಿ ಜ.22ರಂದು ಬೆಂಗಳೂರು ಸ್ವಯಂ ಪ್ರೇರಿತ ಬಂದ್ ಗೆ ಕರೆ

Prasthutha|

ಬೆಂಗಳೂರು : ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಯಲ್ಲಿ ತಪ್ಪಿತಸ್ಥರಲ್ಲದ ಹಾಗೂ ಅಪ್ರಾಪ್ತ ವಯಸ್ಸಿನವರ ಮೇಲೆ ಕಠಿಣ ಕಾನೂನುಗಳನ್ನು ವಜಾಗೊಳಿಸುವಂತೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಮ್ ಮುತ್ತಹಿದಾ ಮಹಾಝ್ ಜ.22ರಂದು ಬೆಂಗಳೂರಿನಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದೆ.

- Advertisement -

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಕರ್ನಾಟಕ ಮುತ್ತಹಿದಾ ಮಹಾಝ್ ನ ರಾಜ್ಯ ಸಂಚಾಲಕ ಮಸೂದ್ ಅಬ್ದುಲ್ ಖಾದರ್, ಈ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಯುವಕರನ್ನು ಉದ್ದೇಶಪೂರ್ವಕವಾಗಿಯೇ ಬಂಧಿಸಲಾಗಿದೆ ಎಂದಿದ್ದಾರೆ. ಕೆಜಿ ಹಳ್ಳಿ ಡಿಜೆ ಹಳ್ಳಿಯಲ್ಲಿ ನಡೆದ ಘಟನೆ ಖಂಡನೀಯ. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು. ತಪ್ಪು ಯಾರೇ ಮಾಡಲಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿ. ಆದರೆ, ಈ ಗಲಭೆ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿಯೇ ಹಲವು ಯುವಕರನ್ನು ಬಂಧಿಸಲಾಗಿದೆ. ಜತೆಗೆ ಯಾವುದೇ ಆಧಾರವಿಲ್ಲದಿದ್ದರೂ, ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದರು.

ಅಮಾಯಕರ ಮೇಲಿನ ಮೊಕದ್ದಮೆಗಳನ್ನು ವಾಪಾಸ್ ಪಡೆಯಬೇಕೆಂದು ಹಲವು ಬಾರಿ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದರೂ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಹೀಗಾಗಿಯೇ ಜ.22ರಂದು ಸಾಮೂಹಿಕವಾಗಿ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಆದರೆ ಅಂದು ಉಆವುದೇ ಮೆರವಣಿಗೆ, ಪ್ರತಿಭಟನೆಗಳನ್ನು ಹಮ್ಮಿಕೊಂಡಿಲ್ಲ ಎಂದು ಅವರು ತಿಳಿಸಿದರು.

- Advertisement -

ಜ.22ರಂದು ತಮ್ಮ ಅಂಗಡಿ-ಮುಂಗಟ್ಟುಗಳು ಸೇರಿದಂತೆ ಇನ್ನಿತರೆ ಚಟುವಟಿಕೆಗಳನ್ನು ಬಂದ್ ಮಾಡಿ ಮನೆಯಲ್ಲಿಯೇ ಇರುವಂತೆ ಈಗಾಗಲೇ ಮಾಹಿತಿ ನೀಡಿದ್ದು, ಉತ್ತಮ ಸ್ಪಂದನೆ ದೊರೆತಿದೆ. ಜೊತೆಗೆ ಈ ಬಂದ್ ಗೆ 18ಕ್ಕೂ ಅಧಿಕ ಸಂಘ ಸಂಸ್ಥೆಗಳು, ಮಸೀದಿ ಸಮಿತಿಗಳು ಬೆಂಬಲ ಸೂಚಿಸಿವೆ ಎಂದು ಅವರು ಹೇಳಿದರು.

Join Whatsapp