ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದರು.
ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿದ್ದ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ವಿಜಯಿಯಾಗಿದ್ದಾರೆ.
ಬೊಮ್ಮಾಯಿ ಗೆಲುವಿನೊಂದಿಗೆ ಹಾವೇರಿ – ಗದಗ ಕ್ಷೇತ್ರದಲ್ಲಿ ಬಿಜೆಪಿ ಪಾರಮ್ಯ ಮುಂದುವರೆದಿದೆ. 2008ರಲ್ಲಿ ಕ್ಷೇತ್ರ ಮರುವಿಂಗಡಣೆಯ ಬಳಿಕ ಶಿವಕುಮಾರ್ ಚನ್ನಬಸಪ್ಪ ಉದಾಸಿ ಸತತವಾಗಿ ಗೆದ್ದಿದ್ದರು. ಆಗಿನಿಂದಲೂ ಬಿಜೆಪಿಯ ಭದ್ರಕೋಟೆಯಾಗಿದ್ದು, 2014 ಹಾಗೂ 2019ರ ಚುನಾವಣೆಗಳಲ್ಲಿ ಉದಾಸಿಯವರೇ ಗೆಲುವು ಕಂಡಿದ್ದರು. ಈ ಬಾರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆದ್ದು ಮೊದಲ ಬಾರಿಗೆ ಸಂಸತ್ಗೆ ಪ್ರವೇಶಿಸುತ್ತಿದ್ದಾರೆ.