ಬೆಂಗಳೂರು: ಮತದಾರರ ವೈಯಕ್ತಿಕ ಮಾಹಿತಿ ಕಳವು ಹಾಗೂ ದುರ್ಬಳಕೆ ಪ್ರಕರಣದಲ್ಲಿ ಬಿಬಿಎಂಪಿಯ ನಾಲ್ವರು ಅಧಿಕಾರಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿವಾಜಿನಗರದ ಕಂದಾಯ ಅಧಿಕಾರಿ ಸುಹೇಲ್ ಅಹಮದ್, ಮಹದೇವಪುರದ ಕಂದಾಯ ಅಧಿಕಾರಿ ಕೆ.ಚಂದ್ರಶೇಖರ್, ಚಿಕ್ಕಪೇಟೆಯ ಉಪ ಕಂದಾಯ ಅಧಿಕಾರಿ ವಿ.ಬಿ.ಭೀಮಾಶಂಕರ್ ಮತ್ತು ರಾಜರಾಜೇಶ್ವರಿ ನಗರದ ಕಂದಾಯ ಅಧಿಕಾರಿ ಮಹೇಶ್ ಅವರನ್ನು ಬಂಧಿಸಲಾಗಿದೆ. ಇವರು ಆರೋಪಿಗಳಿಗೆ ಗುರುತಿನ ಚೀಟಿ ಮಾಡಿಕೊಟ್ಟಿದ್ದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ವರದಿಯಾಗಿದೆ.
‘ಈ ನಾಲ್ವರು ಮತದಾರರ ನೋಂದಣಾಧಿಕಾರಿಗಳಾಗಿ ಕೆಲಸ ಮಾಡಿದ್ದರು. ತಮ್ಮ ವ್ಯಾಪ್ತಿಯ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಆಧಾರ್ ಸಂಖ್ಯೆ ಜೋಡಣೆ ಕೆಲಸಕ್ಕಾಗಿ ಚಿಲುಮೆ ಸಂಸ್ಥೆಯ ಸಿಬ್ಬಂದಿಗೆ ಬಿಎಲ್‌ಒ ಗುರುತಿನ ಚೀಟಿಗಳನ್ನು ಮಾಡಿಕೊಟ್ಟಿದ್ದರು’ ಎಂದು ಮೂಲಗಳು ವಿವರಿಸಿವೆ.
‘ಬಂಧಿತ ಆರೋಪಿಗಳ ಹೇಳಿಕೆ ಆಧರಿಸಿ ನಾಲ್ವರಿಗೆ ನೋಟಿಸ್ ನೀಡಿ ಇತ್ತೀಚೆಗೆ ವಿಚಾರಣೆ ನಡೆಸಲಾಗಿತ್ತು. ನಾಲ್ವರ ಹೇಳಿಕೆ ಪರಿಶೀಲಿಸಿದಾಗ,ಪ್ರಕರಣದಲ್ಲಿ ಅವರೂ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ, ನಾಲ್ವರನ್ನೂ ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.