ಬೆಂಗಳೂರು: ಚಂದ್ರು ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

Prasthutha|

ಬೆಂಗಳೂರು : ಬೆಂಗಳೂರಿನ ಗೌರಿ ಪಾಳ್ಯದಲ್ಲಿ ಕಳೆದ ಕೆಲ ದಿನಗಳ ಹಿಂದೆ ನಡೆದ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಹಸ್ತಾಂತರಿಸಿದೆ.

- Advertisement -

ಚಂದ್ರು ಕೊಲೆ ಪ್ರಕರಣವು ರಾಜಕೀಯ ತಿರುವು ಪಡೆದುಕೊಂಡು ಸಾಕಷ್ಟು ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಚಂದ್ರು ಹಾಗೂ ಶಾಹಿದ್‌ ಬೈಕ್‌ಗಳ ನಡುವೆ ಡಿಕ್ಕಿಯಾಗಿ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿದ್ದರು. ಆದರೆ ಈ ಪ್ರಕರಣವನ್ನು ಬಿಜೆಪಿಯು ಧರ್ಮಗಳ ಮಧ್ಯೆ ಒಡಕುಂಟು ಮಾಡುವ ಸಲುವಾಗಿ ಎಂದಿನಂತೆ ಕೋಮು ಬಣ್ಣಕ್ಕೆ ತಿರುಗಿಸುವ ಪ್ರಯತ್ನವನ್ನು ಮಾಡಿತ್ತು. ಈ ನಡುವೆ ಕೊಲೆ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೇಳಿಕೆಯನ್ನು ಸುಳ್ಳು ಎಂದು ಬಿಜೆಪಿ ಹೇಳಿತ್ತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಪ್ರಕರಣದ ಸತ್ಯಾಸತ್ಯತೆಯನ್ನು ಪಾರದರ್ಶಕ ರೀತಿಯಲ್ಲಿ ತನಿಖೆ ನಡೆಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದೆ. ಸಿಐಡಿ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಸೂಕ್ತ ತನಿಖಾಧಿಕಾರಿಯನ್ನು ತನಿಖೆಗಾಗಿ ನೇಮಕ ಮಾಡಲಿದ್ದಾರೆ ಎನ್ನಲಾಗಿದೆ.

ರಾಜ್ಯ ಸರ್ಕಾರವು ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶಿಸಿದ ಬೆನ್ನಲ್ಲೇ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಸುಮಾರು ಎರಡು ತಾಸು ಕಾಲ ಚರ್ಚಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು. ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಯಾವುದೇ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp