ಭೋಪಾಲ್: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇದೇ ಮೊದಲ ಬಾರಿಗೆ ಹೆಜ್ಜೆ ಹಾಕಿದ್ದಾರೆ. ಅವರು ತಮ್ಮ ಪತಿ ಮತ್ತು ಮಗನೊಂದಿಗೆ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡದ್ದು ಕಾರ್ಯಕರ್ತರಿಗೆ ಉತ್ಸಾಹ ತಂದಿದೆ.
ಮಧ್ಯಪ್ರದೇಶ ಯಾತ್ರೆಯ ಎರಡನೇ ದಿನದಂದು ರಾಹುಲ್ ಗಾಂಧಿ ಅವರು ಖಾಂಡ್ವಾ ಜಿಲ್ಲೆಯ ಬೋರ್ಗಾಂವ್’ನಿಂದ ಪಾದಯಾತ್ರೆಯನ್ನು ಆರಂಭಿಸಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ, ಪತಿ ರಾಬರ್ಟ್ ವಾದ್ರಾ ಮತ್ತು ಮಗ ರೆಹಾನ್ ಅವರು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು. ಕಾರ್ಯಕರ್ತರು ಅವರ ಬಳಿಗೆ ಬರಲು ಪ್ರಯತ್ನಿಸಿದರೂ, ಪೊಲೀಸರು ತಡೆಯುತ್ತಿರುವ ದೃಶ್ಯ ಕಂಡುಬಂದಿದೆ. ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಪೊಲೀಸರು ಹಗ್ಗಗಳನ್ನು ಹಿಡಿದಿದ್ದರು.
ಈ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರೊಂದಿಗೆ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡ ಸೇರಿದ್ದರು. ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ 380 ಕಿ.ಮೀ. ಕ್ರಮಿಸಿದ ಬಳಿಕ ಡಿಸೆಂಬರ್ 4ರಂದು ರಾಜಸ್ತಾನವನ್ನು ಪ್ರವೇಶಿಸಲಿದೆ.