ಬೆಂಗಳೂರು: ಭಾರತ ಜೋಡೋ ಯಾತ್ರೆಯಿಂದಾಗಿ ಬಿಜೆಪಿಯ ಸುಳ್ಳಿನ ಕಾರ್ಖಾನೆ ಶೀಘ್ರದಲ್ಲೇ ಛಿದ್ರವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೈ. ವೇಣುಗೋಪಾಲ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಭಾರತ ಐಕ್ಯತಾ ಯಾತ್ರೆಯ ಸಿದ್ಧತಾ ಪರಿಶೀಲನಾ ಸಭೆ ಮಾಡಿದ್ದೇವೆ. ಪ್ರದೇಶ ಕಾಂಗ್ರೆಸ್ ಹಾಗೂ ರಾಜ್ಯ ನಾಯಕರು ಮಾಡಿರುವ ಎಲ್ಲಾ ಸಿದ್ಧತೆಗಳು ಎಐಸಿಸಿಗೆ ತೃಪ್ತಿ ತಂದಿದೆ. ನಮ್ಮ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಿತ್ಯ ತಯಾರಿ ಕುರಿತು ಪರಿಶೀಲನೆ ನಡೆಸುತ್ತಿದ್ದು, ರಾಜ್ಯದಲ್ಲಿನ ಯಾತ್ರೆ ಅತ್ಯಂತ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.
ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಲ್ಲಿ ಈ ಯಾತ್ರೆ ಆರಂಭವಾಗಿದ್ದು, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಎಲ್ಲಾ ವರ್ಗದಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭ್ಯವಾಗಿದೆ. ನಮ್ಮ ನಿರೀಕ್ಷೆ ಮೀರಿ ಲಕ್ಷಾಂತರ ಜನ ಈ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಚ್ಚರಿಯ ವಿಷಯ ಎಂದರೆ, ನಮ್ಮ ನಾಯಕರು ಹೆಜ್ಜೆ ಹಾಕುವಾಗ ನಮ್ಮ ಕಾರ್ಯಕರ್ತರ ಜತೆ ಜನ ಸಾಮಾನ್ಯರೂ ಕುಟುಂಬ ಸಮೇತವಾಗಿ ಮಕ್ಕಳಿಂದ ವೃದ್ಧರವರೆಗೂ ಉತ್ಸುಕತೆಯಿಂದ ಭಾಗವಹಿಸುತ್ತಿದ್ದಾರೆ. ಇದು ಯಾತ್ರೆಯನ್ನು ಜನ ಒಪ್ಪಿರುವುದಕ್ಕೆ ಸಾಕ್ಷಿ ಎಂದರು.
ಕಳೆದ 10 ವರ್ಷಗಳಿಂದ ಬಿಜೆಪಿ ಹಾಗೂ ಸಂಘ ಪರಿವಾರ ನಮ್ಮ ನಾಯಕ ರಾಹುಲ್ ಗಾಂಧಿ ಅವರ ಘನತೆ ಹಾಳು ಮಾಡಲು ಪ್ರಯತ್ನಿಸುತ್ತಿದೆ. ಈಗ ಜನರಿಗೆ ರಾಹುಲ್ ಗಾಂಧಿ ಅವರು ಯಾರು ಎಂದು ಅರ್ಥವಾಗುತ್ತಿದೆ. ರಾಹುಲ್ ಗಾಂಧಿ ಅವರು ಜನಸಾಮಾನ್ಯರು ಹಾಗೂ ಅವರ ಸಮಸ್ಯೆ ಬಗ್ಗೆ ಹೆಚ್ಚು ಚಿಂತಿತರಾಗಿದ್ದು, ನಿರುದ್ಯೋಗ, ಬೆಲೆ ಏರಿಕೆ, ರೈತರ ಸಂಕಷ್ಟ, ಸಾಮಾಜಿಕ ಸಾಮರಸ್ಯದ ಬಗ್ಗೆ ಧ್ವನಿಯಾಗಿದ್ದಾರೆ. ಆರ್ಥಿಕ, ಸಾಮಾಜಿಕ ಅಸಮಾನತೆ, ರಾಜಕೀಯ ದ್ವೇಷದ ವಿಚಾರವಾಗಿ ಈ ಯಾತ್ರೆ ಮಾಡಲಾಗುತ್ತಿದೆ. ದೇಶದ ರಾಜಕೀಯ ಇತಿಹಾಸದಲ್ಲಿ ಈ ಯಾತ್ರೆ ಒಂದು ತಿರುವು ನೀಡಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯಲಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ. ಅವರು ಭಾಗವಹಿಸಲಿರುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ತಿಳಿಸಿದರು.
ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೇವಾಲ ಅವರು ಆಗಮಿಸಿ ಭಾರತ ಐಕ್ಯತಾ ಯಾತ್ರೆಯ ಸಿದ್ಧತೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಈ ಯಾತ್ರೆ ಪ್ರಮುಖ ಐದು ವಿಚಾರಗಳನ್ನು ಹೊಂದಿದೆ. ಈ ಯಾತ್ರೆಯಲ್ಲಿ ಎಲ್ಲಾ ಪ್ರಮುಖ ನಾಯಕರಿಗೆ ಜವಾಬ್ದಾರಿ ನೀಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಈ ಯಾತ್ರೆ ಸೆ. 30 ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಆರಂಭವಾಗಲಿದ್ದು, ಅ. 2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು. ಬಳ್ಳಾರಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.
ರಾಹುಲ್ ಗಾಂಧಿ ಅವರು ಯುವಕರು, ಮಹಿಳೆಯರು, ರೈತರು, ನಾಗರೀಕ ಸಮುದಾಯಗಳು, ವಿದ್ಯಾರ್ಥಿಗಳು, ಬುಡಕಟ್ಟು ಜನರ ಜೊತೆ ಒಂದೊಂದು ದಿನ ಮಾತುಕತೆ ನಡೆಸಲಿದ್ದಾರೆ. ಈ ಯಾತ್ರೆ ಮಾರ್ಗದಲ್ಲಿ ಬರುವ ಅತಿ ದೊಡ್ಡ ನಗರ ಮೈಸೂರು ಆಗಿದ್ದು, ಮೈಸೂರು ಜನರು ಬೆಳಗ್ಗೆ 7 ಗಂಟೆಗೆ ರಾಹುಲ್ ಗಾಂಧಿ ಜತೆಗೆ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದರು.
ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ , ‘ ರಾಹುಲ್ ಗಾಂಧಿಯವರು ಮುಂದಾಳತ್ವ ವಹಿಸಬೇಕು ಎಂದು ನಮ್ಮ ರಾಜ್ಯದ ಎಲ್ಲಾ ನಾಯಕರ ಒತ್ತಾಸೆ. ಆದರೆ ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕು ‘ ಎಂದು ತಿಳಿಸಿದರು.