ನವದೆಹಲಿ: ರೈಲ್ವೇ ನೇಮಕಾತಿ ಮಂಡಳಿಯ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಭಬುವಾ – ಪಾಟ್ನಾ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲಿನ ಬೋಗಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಿಹಾರದ ಗಯಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದುಷ್ಕೃತ್ಯ ಮೆರೆದ ಆಕ್ರೋಶಿತ ವಿದ್ಯಾರ್ಥಿಗಳನ್ನು ತಡೆಯಲು ಪೊಲೀಸರು ಹಲವು ಸುತ್ತಿನ ಅಶ್ರುವಾಯು ಬಳಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮಾತ್ರವಲ್ಲ ಪರಿಸ್ಥಿತಿ ನಿಯಂತ್ರಣದಲ್ಲಿದೆ. ರೈಲಿನ ಬೋಗಿಗೆ ಬೆಂಕಿ ಹಚ್ಚಿದ ಕೆಲವು ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ ಎಂದು ಗಯಾ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಕುಮಾರ್ ತಿಳಿಸಿದ್ದಾರೆ.
CBT 2 ಪರೀಕ್ಷೆಯನ್ನು ರದ್ದುಪಡಿಸಿ ಫಲಿತಾಂಶವನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ಸತತ ಐದು ಗಂಟೆಗಳ ಕಾಲ ರೈಲನ್ನು ತಡೆದು ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಲಾಗಿತ್ತು. ಈ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿ.ಎಂ) ಡಾ. ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ.